ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ | ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ | ಜಿಪಂ ಸಿಇಓ ರಿಷಿ ಆನಂದ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಸೋಮವಾರ ಆಯೋಜಿಸಲಾಗಿದ್ದ ಜಾಗೃತಿ ಜಾಥಾಕ್ಕೆ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ. ೧೮ ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಅವಕಾಶದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಪ್ರತಿಯೊಬ್ಬ ಯುವಕರ ಆದ್ಯತೆಯಾಗಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪ್ರತಿಯೊಬ್ಬರು ಭಾಗವಹಿಸುವಿಕೆಯನ್ನು ಖಚಿತಪಡಿಸಲು ಮತದಾರರ ಯಾದಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಅತ್ಯಂತ ಪ್ರಮುಖ ಪ್ರಕ್ರಿಯೆಯಾಗಿದೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನದ ಹಕ್ಕು ಪಡೆಯುವ ಯುವ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ನೋಂದಣಿ ಮಾಡಿಕೊಳ್ಳಲು, ತಪ್ಪು ಮಾಹಿತಿಗಳಿದ್ದಲ್ಲಿ ತಿದ್ದುಪಡಿ ಮಾಡಿಸಲು ಹಾಗೂ ಸ್ಥಳಾಂತರಗೊಂಡ ಮತದಾರರು ತಮ್ಮ ವಿವರಗಳನ್ನು ನವೀಕರಿಸಿಕೊಳ್ಳಲು ಈ ವಿಶೇಷ ಪರಿಷ್ಕರಣೆ ಕಾರ್ಯಕ್ರಮವು ಉತ್ತಮ ಅವಕಾಶವಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಹಾಗೂ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಗುರಿಯೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ, ಪದವಿ ಪೂರ್ವ ಇಲಾಖೆಯ ಉಪ ನಿರ್ದೇಶಕರಾದ ಕೆ. ಎ. ಉಪ್ಪಾರ, ಶಾಖಾಧಿಕಾರಿ ಪ್ರಕಾಶ ಗೋಂಗಡಿ,ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳಾದ ಎಂ.ಬಿ. ರಜಪೂತ, ಕಾಲೇಜಿನ ಪ್ರಾಚಾರ್ಯರಾದ ಪಿ.ಎ. ಮೇತ್ರಿ, ಉಪ ಪ್ರಾಚಾರ್ಯರಾದ ಸಿ.ಎಸ್. ಕಾಂಬಳೆ ಸೇರಿದಂತೆ ವಿವಿಧ ಕಾಲೇಜುಗಳ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

