ಪೊಲೀಸ್ ಠಾಣೆಯಲ್ಲೇ ಸ್ವಾಮೀಜಿಯ ಮೇಲೆ ಹಲ್ಲೆ ಪ್ರಕರಣ | ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ) ವಿಜಯಪುರ ಜಿಲ್ಲಾಧ್ಯಕ್ಷ ನಾಗರಾಜ ಕಬಾಡೆ ಒತ್ತಾಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಚಿತ್ರದುರ್ಗ ಜಿಲ್ಲೆಯ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀ ಹರಳಯ್ಯ ಸ್ವಾಮೀಜಿಯವರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಹಾಗೂ ನಂತರ ಪೊಲೀಸ್ ಠಾಣೆಯೊಳಗೆ ನುಗ್ಗಿ ಮತ್ತೊಮ್ಮೆ ಕೊಲೆ ಯತ್ನ ನಡೆಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ) ವಿಜಯಪುರ ಜಿಲ್ಲಾಧ್ಯಕ್ಷ ನಾಗರಾಜ ಕಬಾಡೆ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪೊಲೀಸ್ ಠಾಣೆಯಂತಹ ಸುರಕ್ಷಿತ ಸ್ಥಳದಲ್ಲಿಯೇ ಒಬ್ಬ ಧಾರ್ಮಿಕ ಮುಖಂಡರ ಜೀವಕ್ಕೆ ಅಪಾಯ ಉಂಟಾಗಿರುವುದು ಪೊಲೀಸ್ ಇಲಾಖೆಯ ಕಾರ್ಯವೈಖರಿಯ ವೈಫಲ್ಯವನ್ನು ತೋರಿಸುತ್ತದೆ. ಸಾರ್ವಜನಿಕರ ರಕ್ಷಣೆಯ ಹೊಣೆ ಹೊತ್ತಿರುವ ಇಲಾಖೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆಯುಂಟಾಗುವಂತಹ ಘಟನೆ ಇದಾಗಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ, ಕೊಲೆ ಯತ್ನ ಸೇರಿದಂತೆ ಅನ್ವಯವಾಗುವ ಕಠಿಣ ಕಾನೂನು ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿಷ್ಪಕ್ಷಪಾತ ಇಲಾಖಾ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳದಿದ್ದಲ್ಲಿ, ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ) ವತಿಯಿಂದ ಕಾನೂನುಬದ್ಧ ಹಾಗೂ ಪ್ರಜಾಪ್ರಭುತ್ವದ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕಬಾಡೆ ಎಚ್ಚರಿಸಿದ್ದಾರೆ.

