ಉದಯರಶ್ಮಿ ದಿನಪತ್ರಿಕೆ
ಚಡಚಣ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ತಾಲೂಕು ಪಂಚಾಯತ ಸ್ವೀಪ್ ಸಮಿತಿ ಶನಿವಾರದಂದು ಪಟ್ಟಣದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾವು ಅರ್ಥಪೂರ್ಣವಾಗಿ ಜರುಗಿತು.
ಕಾರ್ಯಕ್ರಮಕ್ಕೆ ಜಾಲನೆ ನೀಡಿ ಮಾತನಾಡಿದ ತಾಲೂಕು ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಶೋಕ ರಾಠೋಡರವರು. ಪ್ರಜಾಪ್ರಭುತ್ವದ ಯಶಸ್ಸು ಮತದಾರರ ಸಕ್ರಿಯ ಭಾಗವಹಿಸುವಿಕೆಯ ಮೇಲೆ ಅವಲಂಬಿತವಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಅಭಿಯಾನವು ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳಲು ಒಂದು ಸುಸಂದರ್ಭವಾಗಿದೆ. ತಾಲೂಕಿನ ಪ್ರತಿಯೊಬ್ಬ ನಾಗರಿಕನು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಜವಾಬ್ದಾರಿಯುತ ಮತದಾರರಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರರಾದ ಸಂಜಯ ಇಂಗಳೆಯವರು. ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾನರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳುವುದು ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ-೨೦೨೬ರ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ, ಪ್ರಜಾಪ್ರಭುತ್ವದ ಅಡಿಪಾಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಸಾಹಯಕ ನಿರ್ದೇಶಕರಾದ ಶಿವದತ್ತ ಕೊಟ್ಟಲಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶ್ರೀ ಸಂಗಮೇಶ್ವರ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಎಚ್.ಆರ್.ಬಗಲಿ ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದು, ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ಸಹದಿಂದ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡರು. ಇಲಾಖಾ ಸಿಬ್ಬಂದಿಗಳ ಈ ಒಗ್ಗಟ್ಟಿನ ಪ್ರದರ್ಶನವು ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಕುರಿತು ಬಲವಾದ ಸಂದೇಶವನ್ನು ರವಾನಿಸಿತು. ಜಾಥಾದ ಉದ್ದಕ್ಕೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ ತಿದ್ದುಪಡಿ ಮಾಡುವ ಹಾಗೂ ಪಟ್ಟಿಯಿಂದ ಹೆಸರು ಪರಿಶೀಲಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

