ವಿಜಯಪುರದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಯಾವುದೇ ಗೊಂದಲಗಳಿಲ್ಲದೆ ನಿಖರವಾದ ಮತದಾರರ ಪಟ್ಟಿ ತಯಾರಿಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ದೋಷ ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಬಿ.ಎಲ್.ಓ.ಗಳು ಮನೆ ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸುತ್ತಿದ್ದು, ರಾಜಕೀಯಕ ಪಕ್ಷಗಳ ಏಜೆಂಟರು ಸೂಕ್ತ ಸಹಕಾರ ನೀಡಬೇಕು. ಎಸ್.ಐ.ಆರ್ ನೋಂದಣಿಯ ಮಹತ್ವ ಸಾರಲು ಸಭೆಗಳನ್ನಷ್ಟೆ ಅಲ್ಲದೆ ಶಾಲೆ-ಕಾಲೇಜುಗಳು ಸೇರಿದಂತೆ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ. ಮತಗಟ್ಟೆವಾರು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಈ ಕಾರ್ಯಕ್ಕೆ ತಮ್ಮ ಸಹಕಾರ ಅಗತ್ಯ. ಎಂದು ಜಿಲ್ಲಾಧಿಕಾರಿಗಳು ರಾಜಕೀಯ ಪ್ರತಿನಿಧಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರರಾದ ಪ್ರೇಮಸಿಂಗ್ ಪವಾರ, ಸಚ್ಚಿದಾನಂದ ತೇರದಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

