ಶೈಕ್ಷಣಿಕ ಚಟುವಟಿಕೆ-ವಸತಿ ವ್ಯವಸ್ಥೆ ಪರಿಶೀಲನೆ | ಮಕ್ಕಳೊಂದಿಗೆ ಸಹಪಂಕ್ತಿ ಭೋಜನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಾರಜೋಳದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಸತಿ ವ್ಯವಸ್ಥೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು, ಮಕ್ಕಳೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟ ಪರಿಶೀಲಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ವಸತಿ ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ನಿತ್ಯ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಉತ್ತಮ ಸೌಲಭ್ಯ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ವಸತಿ ಶಾಲೆಯಲ್ಲಿರುವ ತಂಗಿರುವ ವಿದ್ಯಾರ್ಥಿಗಳಿಗೆ ಊಟ ಹಾಗೂ ಉಪಹಾರದ ವ್ಯವಸ್ಥೆಯಲ್ಲಿ ನಿಲಯದ ನಿಲಯ ಪಾಲಕರು, ಪ್ರಾಚಾರ್ಯರು ಹಾಗೂ ಶಿಕ್ಷಕರು ವಿಶೇಷ ಮುತುವರ್ಜಿ ವಹಿಸಬೇಕು. ಶುಚಿತ್ವ ಮತ್ತು ಸ್ವಚ್ಚತೆಗೆ ಆದ್ಯತೆ ನೀಡುವುದು ಸೇರಿದಂತೆ ಶಿಕ್ಷಕರು ರೂಢಿಸಿಕೊಳ್ಳಬೇಕಾದ ಕೌಶಲ್ಯಗಳ ಕುರಿತು ಪ್ರಾಚಾರ್ಯರು ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಬಳಿಕ ಮಕ್ಕಳ ಸ್ನಾನ ಕೋಣೆ ಹಾಗೂ ಶೌಚಾಲಯ ಸೌಲಭ್ಯಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರಲ್ಲದೆ,
ವಿದ್ಯಾರ್ಥಿಗಳಿಗೆ ಚೆನ್ನಾಗಿ ಅಭ್ಯಾಸ ಮಾಡಲು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯರು, ನಿಲಯ ಪಾಲಕರು, ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

