ಪೋಲಿಸ್ ಕಾನ್‌ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ | ಆ.೨ ರಂದು ಜಿಲ್ಲೆಯ ೬೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ | ೨೪,೪೩೪ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ವೃಂದದ ನಾಗರಿಕ (ಸಿವಿಲ್) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಶಿಸ್ತು ಬದ್ದವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ವಿ.ಬಿ.ದರಬಾರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಒಟ್ಟು ೬೧ ಪರೀಕ್ಷಾ ಕೇಂದ್ರಗಳಲ್ಲಿಯೂ ಯಾವುದೇ ರೀತಿಯ ಲೋಪದೋಷಗಳಿಲ್ಲದೆ ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.
ಆಗಸ್ಟ್ ೦೨,೨೦೨೬ ರಂದು ಬೆಳಿಗ್ಗೆ ೧೦:೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ಈ ಲಿಖಿತ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ ಒಟ್ಟು ೨೪,೪೩೪ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ವಿಜಯಪುರ ನಗರ ವ್ಯಾಪ್ತಿಯ ೫೫ ಕೇಂದ್ರಗಳಲ್ಲಿ ೨೧,೯೯೩ ಅಭ್ಯರ್ಥಿಗಳು, ಕವಲಗಿಯ ೦೨ ಕೇಂದ್ರಗಳಲ್ಲಿ ೮೫೭ ಅಭ್ಯರ್ಥಿಗಳು, ತಿಕೋಟಾದ ೦೩ ಕೇಂದ್ರಗಳಲ್ಲಿ ೧,೦೮೦ ಅಭ್ಯರ್ಥಿಗಳು ಹಾಗೂ ತಿಡಗುಂದಿ ೦೧ ಕೇಂದ್ರದಲ್ಲಿ ೫೦೪ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊAಡಿದ್ದಾರೆ.
ಪರೀಕ್ಷಾ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ೨೦ ಮಾರ್ಗಾಧಿಕಾರಿ ತಂಡವನ್ನು ನೇಮಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು ೬೧ ವೀಕ್ಷಕರನ್ನು ಹಾಗೂ ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು ಮತ್ತು ವಿಶೇಷ ಸ್ಕ್ವಾಡ್ ಸದಸ್ಯರನ್ನು ನಿಯೋಜಿಸಲಾಗಿದೆ ಎಂದರು.
ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ಸಾಮಗ್ರಿಗಳ ಸುರಕ್ಷಿತ ಸಾಗಾಣಿಕೆಗಾಗಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಬೆಳಕು, ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನಂತಹ ಸೌಕರ್ಯ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಿ.. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಬಯೋಮೆಟ್ರಿಕ್, ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಹಾಗೂ ಮೆಟಲ್ ಡಿಟೆಕ್ಟರ್ ಮೂಲಕ ಪರೀಕ್ಷಾರ್ಥಿಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದರು.
ಪರೀಕ್ಷಾ ದಿನದಂದು ಸಾರಿಗೆ ವ್ಯವಸ್ಥೆ ಮತ್ತು ತಡೆರಹಿತ ವಿದ್ಯುತ್ ಪೂರೈಕೆಗೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಯಿತು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರತಕ್ಕದ್ದು. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್, ಬ್ಲೂಟೂತ್, ಇಯರ್ ಫೋನ್, ಕ್ಯಾಲ್ಕುಲೇಟರ್, ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳು, ಪೆನ್ ಡ್ರೈವ್, ತಿನಿಸುಗಳು, ನೀರಿನ ಬಾಟಲಿ, ಕಾಗದ, ಲಾಗ್ ಟೇಬಲ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮುಖ ಮುಚ್ಚುವ ಮಾಸ್ಕ್ ಧರಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪೊಲೀಸ್ ಇಲಾಖೆಯು ಸುಸೂತ್ರ ಪರೀಕ್ಷೆ ನಡೆಸಲು ಜಿಲ್ಲಾಡಳಿತಕ್ಕೆ ಭದ್ರತೆ ಕೈಗೊಳ್ಳಲು ಸೂಚಿಸಲಾಯಿತು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಸಮಸ್ಯೆಯಾಗದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ನಿಯಮಾನುಸಾರ ಅಗತ್ಯ ಕ್ರಮವಹಿಸಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷೆ ನಡೆಸಬೇಕು ಎಂದರು.
ಪರೀಕ್ಷಾ ಕಾರ್ಯದಲ್ಲಿ ತೊಡಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಜಾಗರೂಕತೆಯಿಂದ ನಿರ್ವಹಿಸಬೇಕು. ಯಾವುದೇ ಸಮಸ್ಯೆ ಕಂಡುಬAದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಹೆಸ್ಕಾಂನ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬಿಂಜಗೇರಿ, ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಆನಂದ ಮುಚ್ಚಂಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎ.ಉಪ್ಪಾರ, ಖಜಾನೆ ಇಲಾಖೆಯ ಉಪ ನಿರ್ದೇಶಕರಾದ ಆನಂದ ಮುಚ್ಚಂಡಿ, ಕೆಕೆ ಆರ್ ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ದೇವಾನಂದ ಬಿರಾದಾರ, ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸಿ :ಎಸ್ಪಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಈ ಪರೀಕ್ಷೆಯನ್ನು ಅತ್ಯಂತ ಜಾಗರೂಕತೆಯಿಂದ ನಡೆಸಲು ಶ್ರಮಿಸಿ ಎಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು. ನಮ್ಮೆಲ್ಲರ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ. ಪರೀಕ್ಷಾ ನಿಯಮಗಳನ್ವಯ ಕಾರ್ಯ ನಿರ್ವಹಿಸಿ ಅಭ್ಯರ್ಥಿಗಳ ಡ್ರೆಸ್ ಕೋಡ್ ಬಗ್ಗೆ ಗಮನಹರಿಸಬೇಕು ಎಂದರು.

