ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆ. ೧ ರಂದು ನಗರದ ಗಾಂಧಿ ವೃತ್ತದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ನಡೆಯಲಿರುವ ವ್ಯಸನಮುಕ್ತ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸೇರಿದಂತೆ ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ, ಎಂ.ಆರ್ ಗುರಿಕಾರ, ಎಂ.ಸಿ ಮುಲ್ಲಾ, ಮಹಾದೇವ ರಾವಜಿ, ಫಯಾಜ ಕಲಾದಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

