ಅಧಿಕಾರಿಗಳು ತೀವ್ರ ನಿಗಾವಹಿಸಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಇಟ್ಟಂಗಿ ಭಟ್ಟಿ, ಹೊಟೇಲ್ ಸೇರಿದಂತೆ ಯಾವುದೇ ಉದ್ಯೋಗ ಕ್ಷೇತ್ರಗಳಲ್ಲಿ ಬಾಲಕಾರ್ಮಿಕರು ಕಾರ್ಯನಿರ್ವಹಿಸದಂತೆ ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಕಲ್ಯಾಣ ವಿಭಾಗದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-೨೦೦೫, ಬಾಲ್ಯವಿವಾಹ ತಡೆ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಪೋಕ್ಸೋ ಹಾಗೂ ಬಾಲ್ಯವಿವಾಹ ತಡೆ ಕಾಯ್ದೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಮಾಜದಿಂದ ಬಾಲ್ಯವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಂದು ಇಲಾಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಯಾವುದೇ ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಕ್ಕಳ ರಕ್ಷಣೆಗಾಗಿ ಪ್ರತಿ ತಿಂಗಳು ಕನಿಷ್ಠ ಒಂದು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.
ಪಾಲನಾ ಸಂಸ್ಥೆಗಳಿಗೆ ತಿಂಗಳಿಗೆ ಎರಡು ಸಲ ಭೇಟಿ ಮಾಡಿ, ಮಕ್ಕಳಿಗಿರುವ ಸೌಲಭ್ಯ ಗಳ ಬಗ್ಗೆ ನಿಗಾವಹಿಸಿ, ಮಕ್ಕಳಿಗೆ ಸರಿಯಾದ ಆಹಾರದ ಬಗ್ಗೆ ಗಮನಹರಿಸಬೇಕು. ಜೊತೆಗೆ ಅಧಿಕಾರಿಗಳು ಮಕ್ಕಳೊಂದಿಗೆ ಮಾತನಾಡಿ, ಸಿಸಿಟಿವಿ ಕ್ಯಾಮರಾ ಅಳವಡಿಸಿ, ಅಲ್ಲಿನ ಮೂಲಭೂತ ಸೌಲಭ್ಯ ಕಲ್ಪಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು. ಮಕ್ಕಳ ಸಹಾಯವಾಣಿ ಕೇಂದ್ರಗಳಿಗೆ ಏಪ್ರಿಲ್ ೨೬ರಿಂದ ಜೂನ್ ರೆಗೆ ೧೪೧ ಇದರಲ್ಲಿ ೧೩೦ ಪ್ರಕರಣ ಇತ್ಯರ್ಥಪಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಕೌಟುಂಬಿಕ ಹಿಂಸೆ ತಡೆ ಕಾಯ್ದೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೧೪೯ ಪ್ರಕರಣಗಳು ಬಾಕಿ ಉಳಿದಿರುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಜೊತೆಗೆ ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಕುರಿತು ಏಪ್ರಿಲ್ ನಿಂದ
ಜೂನ್ ಅವಧಿಯ ಸಮಗ್ರ ಮಾಹಿತಿಯನ್ನು ಅಧಿಕಾರಿಗಳು ಸಭೆಗೆ ನೀಡಿದರು.
ಸಂತ್ರಸ್ತ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣವೇ ಅಗತ್ಯ ಕಾನೂನು ನೆರವು ಒದಗಿಸಬೇಕು. ಈ ಕಾಯ್ದೆಗಳ ಕುರಿತು ನಿರಂತರವಾಗಿ ತಿಳಿವಳಿಕೆ ಮೂಡಿಸಬೇಕು. ಶಾಲೆಗಳಿಂದ ಹೊರಗುಳಿದ ಮಕ್ಕಳ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದ ಜಿಲ್ಲಾಧಿಕಾರಿಗಳು, ಒಂದು ತಿಂಗಳಿಗಿAತ ಹೆಚ್ಚು ಕಾಲ ಶಾಲೆಗೆ ಗೈರುಹಾಜರಾಗಿರುವ ಮಕ್ಕಳ ಪಟ್ಟಿಯನ್ನು ಆಯಾ ಶಾಲಾ ಮುಖ್ಯೋಪಾಧ್ಯಾಯರಿಂದ ಪಡೆದುಕೊಳ್ಳಬೇಕು. ಮಗು ಶಾಲೆಗೆ ಬಾರದಿರಲು ನಿಖರ ಕಾರಣವೇನು ಎಂಬುದನ್ನು ಕಂಡುಕೊಂಡು, ಅವರ ಪೋಷಕರನ್ನು ಸಂಪರ್ಕಿಸಿ ಸೂಕ್ತ ಸಲಹೆ ನೀಡಬೇಕು. ಬಳಿಕ ಆ ಮಕ್ಕಳನ್ನು ಮತ್ತೆ ಶಾಲೆಗೆ ಮರು ದಾಖಲಿಸಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಪ್ರೊಬೆಷನರ್ ಐಎಎಸ್ ಅಧಿಕಾರಿ ಅಭಿಷೇಕ ಸೇಹರ್, ಇಂಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದಾರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂಬಾಬಾ ಮುದ್ದೇಬಿಹಾಳ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಇಂಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

