ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಭೂಮಾನಂದ ಅವರ ಬರ್ಬರ ಹತ್ಯೆ ಪ್ರಕರಣವನ್ನು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ತೀವ್ರವಾಗಿ ಖಂಡಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಈ ಕೃತ್ಯ ಎಸಗಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ಹಾಗೂ ವೇಗದ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅಪ್ಪುರಾಜ್ ಒತ್ತಾಯಿಸಿದ್ದಾರೆ.
ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ, ಭದ್ರತೆ ಹಾಗೂ ನ್ಯಾಯ ದೊರಕುವಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ದಲಿತ ಸಮುದಾಯದವರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.

