ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಆ.೧೫ರಂದು ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಶುಕ್ರವಾರ ಪರಿಶೀಲಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಅಚ್ಚುಕಟ್ಟಾಗಿ, ಶಿಸ್ತುಬದ್ಧವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಯುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಕ್ರೀಡಾಂಗಣದಲ್ಲಿ ಧ್ವಜಾರೋಹಣ ವೇದಿಕೆ, ಪಥಸಂಚಲನ,ಗಣ್ಯರು ಹಾಗೂ ಸಾರ್ವಜನಿಕರ ಆಸನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ವಿದ್ಯುತ್ ವ್ಯವಸ್ಥೆ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಅವರು ಪರಿಶೀಲಿಸಿ, ಕಾರ್ಯಕ್ರಮಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ, ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲನಗೌಡ ಬಿರಾದರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಬೋವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

