ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಒಂದೆಡೆ ಮಳೆ ಕೊರತೆ, ಮತ್ತೊಂದೆಡೆ ಕೃಷಿ ಚಟುವಟಿಕೆಗಳಿಗೆ ಎದುರಾಗಿರುವ ಸಂಕಷ್ಟದಿಂದ ತಾಲೂಕಿನ ರೈತರು ತೀವ್ರ ಆತಂಕದಲ್ಲಿದ್ದು, ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ವೆಂಕನಗೌಡ ಪಾಟೀಲ ಸರ್ಕಾರವನ್ನು ಒತ್ತಾಯಿಸಿದರು.
ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರರಿಗೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಮಳೆ ಕೊರತೆಯಿಂದ ರೈತರು ಬಿತ್ತನೆ, ಬೆಳೆ ನಿರ್ವಹಣೆ ಸೇರಿದಂತೆ ವಿವಿಧ ಹಂತಗಳಲ್ಲಿ ಸಂಕಷ್ಟ ಎದುರಿಸುತ್ತಿದ್ದು, ಕೃಷಿಯನ್ನೇ ಅವಲಂಬಿಸಿರುವ ಕುಟುಂಬಗಳ ಜೀವನ ನಿರ್ವಹಣೆಯ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.
ರೈತರಿಗೆ ಪ್ರತಿ ಎಕರೆಗೆ ₹೫೦ ಸಾವಿರ ಪರಿಹಾರ ನೀಡಬೇಕು. ರೈತರ ಉಪಜೀವನಕ್ಕೆ ಪ್ರಮುಖವಾಗಿರುವ ಕೃಷಿ, ಜಾನುವಾರು ಸಾಕಾಣಿಕೆ ಹಾಗೂ ತೋಟಗಾರಿಕೆ ಕ್ಷೇತ್ರಗಳಿಗೆ ತಲಾ ₹೨೫ ಸಾವಿರ ನೆರವು ಒದಗಿಸಬೇಕು. ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳನ್ನು ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಒದಗಿಸಬೇಕು. ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಕುರಿತು ಸೂಕ್ತ ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಪರಿಹಾರ ನೀಡಬೇಕು. ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬರ ಪರಿಸ್ಥಿತಿಯಿಂದ ರೈತರ ಮೇಲೆ ಉಂಟಾಗಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿ ಪತ್ರದಲ್ಲಿ ಬೇಡಿಕೆಗಳನ್ನು ಇಡಲಾಗಿದೆ.
ಈ ವೇಳೆ ಸೋಮನಗೌಡ ಬಿರಾದಾರ, ಮಹಾಂತಗೌಡ ಕಾಶಿನಕುಂಟಿ, ಎಸ್.ಎಸ್.ಬಿರಾದಾರ, ಸಂತೋಷ ಬಿರಾದಾರ, ರವೀಂದ್ರ ಬಿರಾದಾರ, ಲೋಕನಾಥ ಲಮಾಣಿ ಇದ್ದರು.

