ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಈದ್-ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ. ೨೫ ಮತ್ತು ೨೬ರಂದು ವಿಜಯಪುರ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಆಗಸ್ಟ್ ೨೫ರ ಬೆಳಿಗ್ಗೆ ೬ ಗಂಟೆಯಿಂದ ಆ. ೨೬ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಮದ್ಯ ಮಾರಾಟವನ್ನು ವಿಜಯಪುರ ನಗರದಲ್ಲಿ ನಿಷೇಧಿಸಲಾಗಿದೆ.
ಈದ್-ಮಿಲಾದ್ ಪ್ರಯುಕ್ತ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆಗಳು ಜರುಗಲಿವೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರ ಅನ್ವಯ ಸಾರಾಯಿ ಸೇರಿದಂತೆ ಎಲ್ಲಾ ಮಾದರಿಯ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯಲ್ಲಿ ತಿಳಿಸಿದ್ದಾರೆ.
