ಜಿ.ಪಂ. ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣ ಬಡ ಕುಟುಂಬಗಳಿಗೆ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಬಿ–ಜಿ ರಾಮ್–ಜಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸಿ, ಅರ್ಹ ಕೂಲಿಕಾರ್ಮಿಕರಿಗೆ ಉದ್ಯೋಗ ಒದಗಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿದ ಅವರು, ವಿಬಿ–ಜಿ ರಾಮ್–ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳು ಹಾಗೂ ಪ್ರಗತಿಯನ್ನು ಪರಿಶೀಲಿಸಿದರು.
ವಿ.ಜಿ. ರಾಮ್ ಜಿ. ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಉದ್ಯೋಗ ಸೃಜನೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ೧೦೦ ಕ್ಕಿಂತ ಕಡಿಮೆ ಸಂಖ್ಯೆಯ ಕೂಲಿಕಾರರು ಉದ್ಯೋಗದಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಬಳಿಕ ಬೋಳಚಿಕ್ಕಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಾಳ ಕೆರೆಯ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಸಿಇಒ ಅವರು, ಕೂಲಿಕಾರ್ಮಿಕರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ಈಗಾಗಲೇ ಕೆಲಸ ನಿರ್ವಹಿಸಿರುವ ಕಾರ್ಮಿಕರಿಗೆ ಕೂಲಿ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜೆ.ಎಸ್. ಪಠಾಣ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ರಾಜೇಶ ಗಾಯಕವಾಡ, ಗೀತಾ ಕಲ್ಲವಗೋಳ, ಕಾರ್ಯದರ್ಶಿಗಳಾದ ಶಾಂತು ಸಾವಳಗಿ, ಕಲ್ಲಪ್ಪ ಕಂಟ್ಯಪಗೋಳ ಸೇರಿದಂತೆ ತಾಂತ್ರಿಕ ಸಹಾಯಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

