ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಾರಂಗಮಠದಲ್ಲಿ ಶ್ರೀಮಠದ ಪೀಠಾಧ್ಯಕ್ಷರಾದ ಪೂಜ್ಯಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರ ನೇತೃತ್ವದಲ್ಲಿ ತಾಲೂಕಿನಾದ್ಯಂತ ಉತ್ತಮ ಮಳೆಯಾಗಲಿ, ರೈತರಿಗೆ ಸಮೃದ್ಧ ಬೆಳೆ ದೊರೆಯಲಿ ಹಾಗೂ ನಾಡಿನ ಜನತೆ ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಬದುಕಲಿ ಎಂಬ ಸಂಕಲ್ಪದೊಂದಿಗೆ ೨೪ಗಂಟೆಗಳ ಕಾಲ ಶಿವ ಸಪ್ತಾಹ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಿಂದಗಿ ಸಾರಂಗಮಠದಲ್ಲಿ ಪೀಠಾಧಿಪತಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿರುವ ಶಿವಭಕ್ತರು ಭಾಗವಹಿಸಿ ನಿರಂತರವಾಗಿ ಶಿವನಾಮಸ್ಮರಣೆ, ಭಜನೆ, ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನಾಡಿನಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು, ಕೆರೆ-ಕಟ್ಟೆಗಳು ತುಂಬಿ, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿ ಹಾಗೂ ರೈತರ ಬದುಕು ಹಸನಾಗಲಿ ಎಂಬ ಪ್ರಾರ್ಥನೆಯೊಂದಿಗೆ ಶಿವ ಸಪ್ತಾಹ ನಡೆಸಲಾಗುತ್ತಿದೆ ಎಂದು ಸಮ್ಮುಖ ವಹಿಸಿದ ಶ್ರೀಮಠದ ಉತ್ತರಾಧಿಕಾರಿಗಳಾದ ಪೂಜ್ಯಶ್ರೀ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಹೇಳಿದರು.
೨೪ಗಂಟೆಗಳ ಕಾಲ ನಡೆಯುವ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಮಳೆಯಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಶಿವನಾಮಸ್ಮರಣೆ, ಭಜನೆ, ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗುತ್ತಿವೆ. ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರೈತರ ಸಂಕಷ್ಟ ನಿವಾರಣೆಯಾಗಲಿ, ನಾಡಿನಲ್ಲಿ ಉತ್ತಮ ಮಳೆಯಾಗಿ ಸಮೃದ್ಧಿ ನೆಲೆಸಲಿ ಎಂಬ ಆಶಯವನ್ನು ಭಕ್ತರು ವ್ಯಕ್ತಪಡಿಸಿದ್ದಾರೆ.

