ಡಿ.೨೪ರಂದು ವೃಕ್ಷೋತ್ಥಾನ ಹೆರಿಟೇಜ್ ರನ್ ಯಶಸ್ವಿಗೊಳಿಸಲು ಡಿಸಿ ಟಿ.ಭೂಬಾಲನ್ ಮನವಿ
ವಿಜಯಪುರ: ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ರಕ್ಷಣೆಯೊಂದಿಗೆ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ಇದೇ ಡಿ.೨೪ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ್ ಹೆರಿಟೇಜ್ ರನ್-೨೦೨೩ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೊಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಅಧ್ಯಕ್ಷತೆಯಲ್ಲಿ ವೃಕ್ಷೋತ್ಥಾನ ಹೆರಿಟೇಜ್ ರನ್-೨೦೨೩ರ ಅಂಗವಾಗಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಈ ಓಟದಲ್ಲಿ ೩,೫,೧೦ ಮತ್ತು ೨೧ ಕಿ.ಮೀಗಳ ಓಟ ಇದ್ದು, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು, ನಗರದ ವಿವಿಧ ಸ್ಮಾರಕಗಳ ಮುಂದೆ ಈ ಓಟ ನಡೆಯಲಿದೆ. ಹೊರಜಿಲ್ಲೆ, ರಾಜ್ಯಗಳಿಂದ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಓಟಗಾರರು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲೆಯ ಶಾಲಾ ಕಾಲೇಜಿನ ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು, ಮಾಜಿ ಸೈನಿಕರು, ಪೊಲೀಸ್ ಇಲಾಖೆ, ಅಗ್ನಿ ಶಾಮಕ, ಬ್ಯಾಂಕು ಸೇರಿದಂತೆ ಎಲ್ಲಾ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನೊಂದಾಯಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರಣ್ಯ ಬಲಪಡಿಸುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನಕ್ಕೆ ಪುನಶ್ಚೇತನ ನೀಡಿ, ಕೋಟಿ ವೃಕ್ಷ ಅಭಿಯಾನ ಇನ್ನಷ್ಟು ಹೆಚ್ಚು ಬಲಗೊಳಿಸುವ ಅಗತ್ಯತೆ ಇದೆ. ಪರಿಸರ ರಕ್ಷಣೆಯ ಜೊತೆಗೆ ವಿಜಯಪುರ ಐತಿಹಾಸಿಕ ಸ್ಮಾರಕಗಳ ರಕ್ಷಣೆ ಮತ್ತು ಅಭಿವೃದ್ಧಿ ಜಾಗೃತಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಇಂಡಿ ಉಪ ವಿಭಾಗಾಧಿಕಾರಿಗಳಾದ ಅಬೀದ್ ಗದ್ಯಾಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.