ವಿಜಯಪುರದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜನನದ ನಂತರದ ಮೊದಲ ೧೦ ದಿನಗಳಲ್ಲಿ ತಾಯಿ ನೀಡುವ ಎದೆಹಾಲು ಮಗುವಿಗೆ ಅಗತ್ಯವಾದ ಪೋಷಕಾಂಶ ಒದಗಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದ ತಾಯಂದಿರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯರು ಸರ್ಕಾರದ ಮಾತೃವಂದನಾ ಯೋಜನೆಗೆ ನೋಂದಣಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು.
ಮಗುವಿನ ಆರೈಕೆ ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಂತೋಷಕುಮಾರ್ ಎಚ್. ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಗೀತಾ ಗುತ್ತರಗಿಮಠ, ಎಸ್.ಸಿ.ಮ್ಯಾಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

