ಬರಗಾಲ ಪಟ್ಟಿಯಿಂದ ಸಿಂದಗಿ–ಆಲಮೇಲ ಕೈಬಿಟ್ಟಿದ್ದಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ತೀವ್ರ ಆಕ್ರೋಶ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಬರಗಾಲ ಪಟ್ಟಿಯಿಂದ ಸಿಂದಗಿ ಹಾಗೂ ಆಲಮೇಲ ಅವಳಿ ತಾಲೂಕುಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಮಾಜಿ ಶಾಸಕ ರಮೇಶ ಭೂಸನೂರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭೀಕರ ಬರಗಾಲದಿಂದ ರೈತರ ಮೊಗದ ಹರ್ಷ ಕಸಿದುಕೊಂಡಿದೆ. ಇಂತಹ ಸಂದರ್ಭದಲ್ಲಿ ಬರಗಾಲ ಪಟ್ಟಿಯಿಂದ ಅವಳಿ ತಾಲೂಕುಗಳನ್ನು ಕೈಬಿಟ್ಟಿರುವುದು ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರದ ಈ ಮಲತಾಯಿ ಧೋರಣೆ ಸರಿಯಲ್ಲ ಎಂದು ಕಿಡಿಕಾರಿದರು.
ಸರ್ಕಾರ ಕೇವಲ ಕಚೇರಿ ವರದಿಗಳಿಗೆ ಸೀಮಿತವಾಗದೆ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಳ್ಳಬೇಕು. ಸಿಂದಗಿ, ಆಲಮೇಲ ತಾಲೂಕುಗಳ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು. ಕೂಡಲೇ ಸಿಂದಗಿ ಹಾಗೂ ಆಲಮೇಲ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು. ರೈತರ ಹಿತಕ್ಕಾಗಿ ಉಗ್ರ ಹೋರಾಟ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.

