ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರತಿಯೊಬ್ಬ ಕ್ರೀಡಾಪಟು ಕ್ರೀಡಾ ಸ್ಪೂರ್ತಿ, ಶಿಸ್ತು ಹಾಗೂ ಆತ್ಮವಿಶ್ವಾಸದಿಂದ ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕ ಪ್ರಕಾಶ ನಾಲತವಾಡ ಹೇಳಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರವಿವಾರ ನಡೆದ ಸಿದ್ದೇಶ್ವರ ಬಿ ವಲಯದ ಪ್ರೌಢಶಾಲೆಗಳ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಶಿಸ್ತು, ಸಮಯಪ್ರಜ್ಞೆ, ನಾಯಕತ್ವ ಗುಣ ಹಾಗೂ ಆತ್ಮವಿಶ್ವಾಸ ಬೆಳೆಸುತ್ತದೆ. ಸೋಲು ಗೆಲುವನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ, ಉತ್ತಮ ಪ್ರದರ್ಶನ ನೀಡುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಪಂದ್ಯಾವಳಿ ಉದ್ಘಾಟಿಸಿದ ಶಿಕ್ಷಕರ ಸಂಘದ ನಗರ ಘಟಕದ ಅಧ್ಯಕ್ಷ ಸಯ್ಯದಜುಬೇರ ಕೆರೂರ ಮಾತನಾಡಿ, ಮಕ್ಕಳು ಮೊಬೈಲ್ ದಾಸರಾಗದೆ ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ದೈಹಿಕ ಶ್ರಮದ ಮೂಲಕ ಆರೋಗ್ಯ ಕಾಪಾಡಿಕೊಂಡು, ಕ್ರೀಡೆಯಿಂದ ಮಾನಸಿಕ ನೆಮ್ಮದಿ ಹಾಗೂ ಉತ್ಸಾಹ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಕಬೂಲ್ ಕೊಕಟನೂರ, ನಗರ ಘಟಕದ ಕಾರ್ಯದರ್ಶಿ ಮಂಜುನಾಥ ಅರೆಶಂಕರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸವಿತಾ ಗೋಡೆಕರ, ಅಭಿನವ ಪ್ರೌಢಶಾಲೆಯ ಮುಖ್ಯಸ್ಥ ಮೋಹನ ದಳವಾಯಿ, ಸಿಆರ್‌ಪಿಗಳಾದ ಸವಿತಾ ಧನಗೊಂಡ, ಬಿ.ಎ. ಬಿರಾದಾರ ಸೇರಿದಂತೆ ಶಿಕ್ಷಕರು, ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಕಪ್ ವಿತರಿಸಲಾಯಿತು.

