ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ್ ನಾರಾಯಣ ಚೆನ್ನಾಳ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾಹಿತಿ ಹಕ್ಕು ಕಾಯ್ದೆಯು ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಕಾಯ್ದುಕೊಳ್ಳುವಲ್ಲಿ ಅತ್ಯಂತ ಪ್ರಮುಖ ಕಾಯ್ದೆಯಾಗಿದೆ. ಈ ಕಾಯ್ದೆಯ ಮೂಲಕ ಪ್ರಜೆಗಳಿಗೆ ಸರ್ಕಾರದ ಆಡಳಿತದ ಕುರಿತು ಪ್ರಶ್ನಿಸುವ ಹಾಗೂ ಅಗತ್ಯ ಮಾಹಿತಿಯನ್ನು ಪಡೆಯುವ ಹಕ್ಕು ದೊರೆತಿದೆ ಎಂದು ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ್ ನಾರಾಯಣ ಚೆನ್ನಾಳ ಅವರು ತಿಳಿಸಿದ್ದಾರೆ.
ವಿಶ್ವದ ೧೧೨ಕ್ಕೂ ಹೆಚ್ಚು ದೇಶಗಳಲ್ಲಿ ಮಾಹಿತಿ ಹಕ್ಕಿಗೆ ಸಂಬಂಧಿಸಿದ ಕಾಯ್ದೆಗಳು ಜಾರಿಯಲ್ಲಿದ್ದು, ಈ ಪರಿಕಲ್ಪನೆಗೆ ಸುಮಾರು ೩೦೦ ವರ್ಷಗಳ ಇತಿಹಾಸವಿದೆ. ಭಾರತದಲ್ಲಿ ೨೦೦೫ರಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದಿದ್ದು, ಅದೇ ವರ್ಷ ಕರ್ನಾಟಕದಲ್ಲಿಯೂ ಕಾಯ್ದೆಯನ್ನು ಅನುಷ್ಠಾನಗೊಳಿಸಲಾಯಿತು. ದೇಶದಲ್ಲಿಯೇ ಮಾಹಿತಿ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಪ್ರಕರಣಗಳ ವಿಲೇವಾರಿಯಲ್ಲಿಯೂ ಕರ್ನಾಟಕ ಮಾಹಿತಿ ಆಯೋಗವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕ ಮಾಹಿತಿ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಅರ್ಜಿದಾರರಿಗೆ ಸೂಕ್ತ ಮಾಹಿತಿಯನ್ನು ನೀಡದೆ ನಿರ್ಲಕ್ಷ್ಯ ವಹಿಸಿದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದಂಡ ವಿಧಿಸುವ ಅಧಿಕಾರ ಮಾಹಿತಿ ಆಯೋಗಕ್ಕಿದೆ. ಸಕಾಲದಲ್ಲಿ ಮಾಹಿತಿ ನೀಡದೆ ದಂಡನೆಗೆ ಒಳಗಾಗುವ ಅಧಿಕಾರಿಗಳ ವಿರುದ್ಧ ಸರ್ಕಾರದ ಇತ್ತೀಚಿನ ನಿರ್ದೇಶನದಂತೆ, ಹೆಚ್.ಆರ್.ಎಂ.ಎಸ್. ವ್ಯವಸ್ಥೆಯ ಮೂಲಕ ದಂಡದ ಮೊತ್ತವನ್ನು ನೇರವಾಗಿ ಅವರ ವೇತನದಿಂದಲೇ ಕಡಿತಗೊಳಿಸುವ ಕ್ರಮ ಜಾರಿಗೆ ಬರಲಿದೆ.
ಆದ್ದರಿಂದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿರ್ಲಕ್ಷಿಸದೆ, ನಿಗದಿತ ಕಾಲಮಿತಿಯೊಳಗೆ ಸೂಕ್ತ ಹಾಗೂ ಸಮರ್ಪಕ ಮಾಹಿತಿಯನ್ನು ಒದಗಿಸುವ ಮೂಲಕ ಕಾಯ್ದೆಯ ಆಶಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು.
ಬೆಳಗಾವಿ ವಿಭಾಗದ ಪೊಲೀಸ್, ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಸಕಾಲದಲ್ಲಿ ಮಾಹಿತಿ ನೀಡದ ಹಿನ್ನೆಲೆಯಲ್ಲಿ ದಂಡ ವಿಧಿಸಿ ಆದೇಶಗಳನ್ನು ಹೊರಡಿಸಲಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ್ ನಾರಾಯಣ ಚೆನ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

