ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿರುವ ಎಲ್ಲ ಗರ್ಭಿಣಿಯರ ಮಾಹಿತಿಯನ್ನು ಆರ್.ಸಿ.ಹೆಚ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನಿಗದಿತ ಸಮಯದಲ್ಲಿ ನೋಂದಣಿ ಮಾಡಬೇಕು ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಎಲ್ಲ ತಾಲೂಕಾ ಆರೋಗ್ಯ ಅಧಿಕಾರಿಗಳು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಕಡಿಮೆ ಪ್ರಗತಿ ಸಾಧಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಭೆಯನ್ನು ಕರೆದು ಹೆಚ್ಚಿನ ಪ್ರಗತಿ ಸಾಧಿಸಲು ಕ್ರಮವಹಿಸಬೇಕು ಎಂದರು.
ಆರ್.ಬಿ.ಎಸ್.ಕೆ ತಂಡದಿಂದ ಅಂಗನವಾಡಿ ಕೇಂದ್ರ ಹಾಗೂ ಶಾಲೆಯ ಮಕ್ಕಳ ಆರೋಗ್ಯ ತಪಾಸಣೆಯಲ್ಲಿ ನ್ಯೂನ್ಯತೆ ಕಂಡುಬಂದ ಮಕ್ಕಳು ಹಾಗೂ ಮೇಲ್ಮಟ್ಟದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಕ್ಕಳ ಮಾಹಿತಿಯನ್ನು ನೀಡಲು ತಿಳಿಸಿದರು.
೨೦೨೬-೨೭ ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಮಟ್ಟದಲ್ಲಿ ಮಾಹಿತಿ ಶಿಕ್ಷಣ ಮತ್ತು ಸಂವಹನ ಮೂಲಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆಯಲ್ಲಿಯ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ನಿಯಮಾನುಸಾರ ಅನುಷ್ಠಾನಗೊಳಿಸಬೇಕು. ಆಯ್ದ ಸ್ಥಳಗಳಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮದ ಬಗ್ಗೆ ಹೊರ್ಡಿಂಗ್ಸ್ ಅಳವಡಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಂ. ಬಿ. ಬಿರಾದಾರ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳ್ಳಿ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಅರ್ಚನಾ ಕುಲಕರ್ಣಿ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಜಾನ್ ಕಟವಟೆ, ಜಿಲ್ಲೆಯ ಎಲ್ಲಾ ತಾಲೂಕಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಆಯುಷ್‌ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

