ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ | ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ನೇತೃತ್ವದಲ್ಲಿ ಪಕ್ಷಾತೀತವಾಗಿ ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಸಾವಿರಾರು ರೈತರು ಝಳಕಿ ರಾಷ್ಟ್ರೀಯ ಹೆದ್ದಾರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ನಿದ್ರಾವಸ್ಥೆಯಲ್ಲಿರುವ ಶಾಸಕರನ್ನು ಎಚ್ಚರಿಸುವ ಸಮಯ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಮತ್ತು ವಿಜಯಪುರ ಜಿಲ್ಲಾ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ ರಾಘವೇಂದ್ರ ಕಾಪಸೆ, ಮಾಜಿ ಶಾಸಕ ರವಿಕಾಂತ ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, ಇಂಡಿ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿ, ರೈತರ ಸಾಲಮನ್ನಾ ಮಾಡಬೇಕು, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು, ಅಗತ್ಯವಿರುವ ಕಡೆ ಗೋಶಾಲೆ ಆರಂಭಿಸಬೇಕು ಹಾಗೂ ಬಾಕಿ ಇರುವ ಬೆಳೆ ವಿಮೆ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾಕಾರರು ಉಪತಹಶೀಲ್ದಾರ್ ಆನಂದ ಪಮ್ಮಾರ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶೀಲವಂತ ಉಮರಾಣಿ, ಎಂ.ಎಂ.ಎಸ್. ಪಾಟೀಲ, ಮರೇಪ್ಪ ಗಿರಣಿವಡ್ಡರ, ರವಿ ವಗ್ಗೆ, ಅಯೂಬ್ ನಾಟೀಕರ, ಬಾಳು ಮುಳಜಿ, ಗುರುನಾಥ ಬಗಲಿ, ವಿಜಯಕುಮಾರ ಭೋಸಲೆ, ನಾಗನಾಥ ಬಿರಾದಾರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

