ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ| ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ 10 ತಾಲೂಕುಗಳನ್ನು ಬರ ಘೋಷಣೆಯಿಂದ ಹೊರಗಿಟ್ಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಸರ್ಕಾರದ ಈ ನಿರ್ಧಾರವು ಜಿಲ್ಲೆಯ ರೈತರ ನಡುವೆ ತಾರತಮ್ಯದ ಭಾವನೆ ಮೂಡಿಸಿದ್ದು, ವಿಜಯಪುರ ಜಿಲ್ಲೆಯ 10 ತಾಲೂಕುಗಳ ರೈತರಿಗೆ ಅನ್ಯಾಯವಾಗುತ್ತಿರುವಾಗ ಜಿಲ್ಲೆಯ ಎಂಟು ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ?” ಎಂದು ಸೋಲಾಪುರ್ ಪ್ರಶ್ನಿಸಿದ್ದಾರಲ್ಲದೆ, ಈಗ್ಲಾದ್ರೂ ಅವರು ರೈತರ ಪರವಾಗಿ ಧ್ವನಿ ಎತ್ತಲಿ ಎಂದು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಭೋಗೇಶ್ ಸೋಲಾಪುರ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸುವುದರ ಜೊತೆಗೆ ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.

