ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವ್ಯಕ್ತಿತ್ವ ವಿಕಸನವು ಹೊರಗಿನ ಆಡಂಬರದಿಂದ ರೂಪುಗೊಳ್ಳುವುದಿಲ್ಲ. ಆತ್ಮಾನುಸಂಧಾನ, ಆತ್ಮಾವಲೋಕನ ಹಾಗೂ ಅಂತರಂಗದ ಶುದ್ಧಿಯ ಮೂಲಕವೇ ವ್ಯಕ್ತಿತ್ವದ ನಿಜವಾದ ಅನಾವರಣವಾಗುತ್ತದೆ ಎಂದು ಇಂಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರವಿಕುಮಾರ ಅರಳಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ (IQAC) ಅಡಿಯಲ್ಲಿ ಹಮ್ಮಿಕೊಂಡಿದ್ದ ‘ಯುವಕರಲ್ಲಿ ವ್ಯಕ್ತಿತ್ವ ವಿಕಸನದ ಮಹತ್ವ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯಲ್ಲೂ ಅಡಗಿರುವ ಸಾಮರ್ಥ್ಯವನ್ನು ಗುರುತಿಸಿ, ಉತ್ತಮ ಮೌಲ್ಯಗಳು, ಶಿಸ್ತು, ಸಮಯಪ್ರಜ್ಞೆ ಹಾಗೂ ಮಾನವೀಯ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸಂವಹನ ಕೌಶಲ್ಯ, ನಾಯಕತ್ವ ಗುಣ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ಸೋಲನ್ನು ಅನುಭವದ ಪಾಠವನ್ನಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಹಳೆಮನಿ ಮಾತನಾಡಿ, ಇಂತಹ ವಿಶೇಷ ಉಪನ್ಯಾಸಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದ್ದು, ಶಿಕ್ಷಣದ ಜೊತೆಗೆ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಐಕ್ಯೂಎಸಿ ಸಂಯೋಜಕರಾದ ಡಾ. ಆರ್.ಡಿ. ಬೆನಕನಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಪ್ರೊ. ರಾಜೇಸಾಬ, ಪ್ರೊ. ಸಿರಾಜ್ ಖಾದ್ರಿ, ಪ್ರೊ. ಕೃಷ್ಣಾರೆಡ್ಡಿ, ಪ್ರೊ. ಸ್ವಾಗತ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

