ಬಾಗಿಲಿಗೆ ಬಂತು ಸರ್ಕಾರ; ಸೇವೆಗೆ ಇರಲಿ ಸಹಕಾರ | ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ | ಸಚಿವ ಎಂ.ಬಿ. ಪಾಟೀಲ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಆಶಯದಂತೆ ಆರಂಭಿಸಿರುವ ಪ್ರಜಾಸೇವೆ ಆಂದೋಲನ ಯಶಸ್ವಿಯಾಗಲು ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.
ಸ್ಥಳೀಯ ಗುರುಕೃಪಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ರಾಜ್ಯಮಟ್ಟದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೇವೆ ಆಂದೋಲನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಜನರು ಆಶೀರ್ವದಿಸಿ 130 ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಪ್ರಥಮ ಬಾರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಾಗ ದೇಶದಾದ್ಯಂತ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಇಂದು ಆ ಎಲ್ಲ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ಜನರು ತಮ್ಮ ಕುಂದುಕೊರತೆ ಹಾಗೂ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪ್ರಜಾಸೇವೆ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಮೊದಲು ಬಬಲೇಶ್ವರದಲ್ಲಿ ಕಾರ್ಯಕ್ರಮ ಆಯೋಜಿಸಲು ಸಲಹೆ ನೀಡಿದ್ದರು. ಆದರೆ ಜಿಲ್ಲಾ ಕೇಂದ್ರದಿಂದ ದೂರವಿರುವ, ಸ್ವಾತಂತ್ರ್ಯ ಬಂದಾಗಿನಿಂದಲೂ ನೀರಾವರಿ ಹಾಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಗಡಿಭಾಗದ ಜನರಿಗೆ ಸರ್ಕಾರದ ಸೇವೆ ತಲುಪಬೇಕು ಎಂಬ ಉದ್ದೇಶದಿಂದ ಚಡಚಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಎಲ್ಲರೂ ಕೈಜೋಡಿಸಿ ಆಂದೋಲನವನ್ನು ಯಶಸ್ವಿಗೊಳಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಸಾರ್ವಜನಿಕರ ಕೆಲಸ ಮಾಡಲು ಹಿಂದೇಟು ಹಾಕುವ ಅಧಿಕಾರಿಗಳ ವಿರುದ್ಧ ಹಿರಿಯ ಅಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಅಧಿಕಾರಿಗಳ ಮೇಲೆ ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆಯಿಂದ ನೀಡಲಾಗುವ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಮಾಣಪತ್ರ, ತಾಲೂಕು ಪಂಚಾಯಿತಿಯಿಂದ ಜಾಬ್ ಕಾರ್ಡ್, ವಿಕಲಚೇತನರಿಗೆ ಯು.ಡಿ.ಐ.ಡಿ. ಕಾರ್ಡ್ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆಯ ಪಾಸ್‌ಬುಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್. ಗಿರೀಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜಿಲ್ಲಾ ಹಾಗೂ ತಹಶೀಲ್ದಾರ ಸಂಜಯ ಇಂಗಳೆ ಸೆರಿದಂತೆ ತಾಲೂಕ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ
ಪ್ರಜಾಸೇವೆ ಆಂದೋಲನವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಒಬ್ಬ ನಿರ್ಗತಿಕನಿಗೆ ಪಿಂಚಣಿ ದೊರಕಿಸಲು ಸಾಧ್ಯವಾದರೂ ನಮ್ಮ ಸೇವೆ ಸಾರ್ಥಕವಾಗುತ್ತದೆ. ಇದು ಸಾರ್ವಜನಿಕರಿಗಾಗಿ ರೂಪಿಸಿರುವ ಯೋಜನೆಯಾಗಿದೆ. ಆಂದೋಲನದಲ್ಲಿ ಸ್ವೀಕರಿಸುವ ಅರ್ಜಿಗಳನ್ನು ಆನ್‌ಲೈನ್ ಮೂಲಕ ದಾಖಲಿಸಿ ಸಂಬಂಧಪಟ್ಟ ಇಲಾಖೆಗೆ ರವಾನಿಸಲಾಗುವುದು. ಸಾರ್ವಜನಿಕರು ಮನೆಯಿಂದಲೇ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದಾಗಿದೆ ಎಂದು ಸಚಿವರು ತಿಳಿಸಿದರು.
210 ಅರ್ಜಿಗಳ ಸ್ವೀಕಾರ
ಪ್ರಜಾಸೇವೆ ಆಂದೋಲನದಲ್ಲಿ ರೈತರು, ಸಾರ್ವಜನಿಕರು, ವಿಕಲಚೇತನರು ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 210 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಚಡಚಣ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವುದು, ತಾಲೂಕು ಕೇಂದ್ರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ, ನೀರಾವರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದ ಅರ್ಜಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದವು.
ಸ್ವೀಕರಿಸಲಾದ ಅರ್ಜಿಗಳನ್ನು ಆನ್‌ಲೈನ್ ಮೂಲಕ ದಾಖಲಿಸಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಬುಧವಾರ ಪರಿಶೀಲನೆ ನಡೆಸಿ ಅವುಗಳನ್ನು ಇತ್ಯರ್ಥಪಡಿಸಲಿದ್ದಾರೆ ಎಂದು ಕಂದಾಯ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.
ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ
ಪ್ರಜಾಸೇವೆ ಆಂದೋಲನದ ಪ್ರಯೋಜನ ಪಡೆಯಲು ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಎದುರಾದ ಪರಿಣಾಮ ಅರ್ಜಿ ಸಲ್ಲಿಸಲು ಬಂದಿದ್ದ ಸಾರ್ವಜನಿಕರು ಕೆಲಕಾಲ ತೀವ್ರ ತೊಂದರೆ ಅನುಭವಿಸುವಂತಾಯಿತು.

