ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ೨೦೦೬ರ ನಂತರ ನೇಮಕಗೊಂಡ ರಾಜ್ಯದ ೪ ಸಾವಿರಕ್ಕೂ ಅಧಿಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹೊಸ ಪಿಂಚಣಿ ಯೋಜನೆ (ಓPS)ಯಿಂದ ಹಳೆ ಪಿಂಚಣಿ ಯೋಜನೆ (ಔPS) ವ್ಯಾಪ್ತಿಗೆ ಒಳಪಡಿಸಿ ರಾಜ್ಯ ಸರ್ಕಾರ ಐತಿಹಾಸಿಕ ಆದೇಶ ಹೊರಡಿಸಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ೨೦೦೫ರಲ್ಲಿ ಹೊರಡಿಸಿದ ಅಧಿಸೂಚನೆಯನ್ವಯ ೨೦೦೬ರ ನಂತರ ನೇಮಕಗೊಂಡ ಅರ್ಹ ಸರ್ಕಾರಿ ನೌಕರರನ್ನು ಹಳೆ ಪಿಂಚಣಿಗೆ ಒಳಪಡಿಸುವ ಪ್ರಕ್ರಿಯೆ ಆರಂಭವಾಗಿತ್ತು. ಈ ಸಂಬಂಧ ಕಳೆದ ಮೂರ್ನಾಲ್ಕು ವರ್ಷಗಳಿಂದ ಶಿಕ್ಷಕರ ಸಂಘವು ಸರ್ಕಾರದ ಮಟ್ಟದಲ್ಲಿ ನಿರಂತರ ಹೋರಾಟ ಹಾಗೂ ಪ್ರಯತ್ನ ನಡೆಸಿತ್ತು ಎಂದು ನುಗ್ಗಲಿ ಹೇಳಿದರು.

