ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಗಣೇಶ ಚತುರ್ಥಿ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಭಕ್ತಿಭಾವದಿಂದ ಆಚರಿಸುವ ಮೂಲಕ ಭಾವೈಕ್ಯತೆಗೆ ಮಾದರಿಯಾಗಬೇಕು ಎಂದು ತಹಶೀಲ್ದಾರ ಸಂತೋಷ ಮ್ಯಾಗೇರಿ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜಾ ಕಾರ್ಯಕ್ರಮ, ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಗಣೇಶೋತ್ಸವ ಮಂಡಳಿಗಳು ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಶಿಸ್ತುಬದ್ಧವಾಗಿ ಕಾರ್ಯಕ್ರಮ ಆಯೋಜಿಸಬೇಕು. ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಅನುಮತಿಗೆ ಸಿಂಗಲ್ ವಿಂಡೋ
ಪಿಎಸ್‌ಐ ಅಶೋಕ್ ನಾಯಕ್ ಮಾತನಾಡಿ, ಗಣೇಶೋತ್ಸವ ಮಂಡಳಿಗಳಿಗೆ ಅಗತ್ಯವಿರುವ ಅನುಮತಿಗಳನ್ನು ಸಿಂಗಲ್ ವಿಂಡೋ ವ್ಯವಸ್ಥೆಯ ಮೂಲಕ ಪೊಲೀಸ್ ಕಚೇರಿಯಲ್ಲಿಯೇ ನೀಡಲಾಗುವುದು. ಮಂಡಳಿಗಳು ನಿಗದಿತ ಸಮಯದಲ್ಲಿ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಧ್ವನಿವರ್ಧಕ ಬಳಕೆ ಸೇರಿದಂತೆ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ಪೊಲೀಸರೊಂದಿಗೆ ಸಹಕರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಗ್ರಾಮದ ಮುಖಂಡ ಟಿ.ಟಿ. ಹಗೆದಾಳ ಮಾತನಾಡಿ, ಲೋಕಮಾನ್ಯ ತಿಲಕರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಅದೇ ಆಶಯವನ್ನು ಮುಂದುವರಿಸಿಕೊಂಡು ಇಂದಿನ ಯುವಕರು ಗಣೇಶೋತ್ಸವದಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವೀರೇಶ್ ಹಟ್ಟಿ ಮಾತನಾಡಿ, ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳ, ಮೆರವಣಿಗೆ ಮಾರ್ಗ ಹಾಗೂ ವಿಸರ್ಜನಾ ಸ್ಥಳಗಳಲ್ಲಿ ಪಟ್ಟಣ ಪಂಚಾಯಿತಿಯಿಂದ ಅಗತ್ಯ ಸ್ವಚ್ಛತೆ ಮತ್ತು ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಪರಿಸರ ಸ್ನೇಹಿ ಆಚರಣೆಗೆ ಕರೆ
ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯುವಕರು ನೀರಿನಾಳಕ್ಕೆ ತೆರಳುವಾಗ ಎಚ್ಚರಿಕೆ ವಹಿಸಬೇಕು. ಪರಿಸರಕ್ಕೆ ಹಾನಿಯಾಗದಂತೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸಬೇಕು. ಪ್ಲಾಸ್ಟಿಕ್ ಬಳಕೆ ತಪ್ಪಿಸಿ ಸ್ವಚ್ಛತೆ ಕಾಪಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.
ಸಭೆಯಲ್ಲಿ ತಾಲೂಕಿನ ವಿವಿಧ ಗಣೇಶೋತ್ಸವ ಮಂಡಳಿಗಳ ಪದಾಧಿಕಾರಿಗಳು, ಪಟ್ಟಣದ ಮುಖಂಡರು, ಪೊಲೀಸ್ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

