ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ದುರ್ಬಲ ವರ್ಗಗಳ ಏಳಿಗೆಗಾಗಿ ನಿರಂತರವಾಗಿ ಹೋರಾಟ ನಡೆಸಿ, ಎಲ್ಲರಿಗೂ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ದೊರಕಿಸಲು ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವತಿಯಿಂದ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಅವರಲ್ಲಿದ್ದ ಓದಿನ ಹಂಬಲ, ಜ್ಞಾನಾರ್ಜನೆಯ ಆಸಕ್ತಿ ಹಾಗೂ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಥಿತಿಗಳಾಗಿ ಭಾಗವಹಿಸಿದ್ದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಕಾಶ ಮೇತ್ರಿ ಮಾತನಾಡಿ, ಡಾ. ಅಂಬೇಡ್ಕರ್ ಅವರು ದೇಶಕ್ಕೆ ನೀಡಿದ ಸಂವಿಧಾನವು ಜಗತ್ತಿನಲ್ಲಿಯೇ ಶ್ರೇಷ್ಠವಾದದ್ದು. ಸಂವಿಧಾನದ ಆಶಯಗಳನ್ನು ಪಾಲಿಸುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಾಮಾಜಿಕ ಅಸಮಾನತೆಗಳನ್ನು ತೊಡೆದುಹಾಕಲು ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಸಿ.ಎಸ್. ಪೂಜಾರಿ ಅವರು, ಡಾ. ಬಿ.ಆರ್.ಅಂಬೇಡ್ಕರ್ ಅವರ ಬಾಲ್ಯ, ಶಿಕ್ಷಣ, ಹೋರಾಟ ಹಾಗೂ ಸಾಧನೆಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೃವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಉಪನ್ಯಾಸಕಿ ಎಂ.ಎಂ. ದಖನಿ ಸೇರಿದಂತೆ ಕಾಲೇಜಿನ ಸಿಬ್ಬಂದಿ, ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

