ಗಣೇಶ ಮೂರ್ತಿಗಳ ಸುರಕ್ಷಿತ ಹಾಗೂ ಪರಿಸರ ಸ್ನೇಹಿ ವಿಸರ್ಜನೆಗೆ ಅನುಕೂಲ | ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಗಣೇಶ ಮೂರ್ತಿಗಳ ಸುರಕ್ಷಿತ ಹಾಗೂ ಪರಿಸರ ಸ್ನೇಹಿ ವಿಸರ್ಜನೆಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆಯು ಜೈಲ್ ದರ್ಗಾ ಹಾಗೂ ಕೆಎಸ್‌ಆರ್‌ಟಿಸಿ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಸಮೀಪ ಕೃತಕ ಗಣೇಶ ವಿಸರ್ಜನಾ ಹೊಂಡಗಳ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಭರದಿಂದ ಕಾಮಗಾರಿ ನಡೆದಿದೆ ಎಂದು ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ವಿಸರ್ಜನಾ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಉದ್ದೇಶದಿಂದ ಈ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ನಿರ್ಮಾಣ ಹಂತದಲ್ಲಿರುವ ಈ ಹೊಂಡಗಳ ಹತ್ತಿರ ಅಗತ್ಯ ಮೂಲಭೂತ ಸೌಕರ್ಯಗಳು ಮತ್ತು ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದವರು ತಿಳಿಸಿದ್ದಾರೆ. ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ಸಾರ್ವಜನಿಕರು ಹಾಗೂ ಗಣೇಶ ಮಂಡಳಿಗಳು ಪಾಲಿಕೆಯಿಂದ ಸಿದ್ಧಪಡಿಸಲಾಗುತ್ತಿರುವ ಕೃತಕ ಹೊಂಡಗಳಲ್ಲೇ ಮೂರ್ತಿಗಳನ್ನು ವಿಸರ್ಜಿಸಿ ಸಹಕರಿಸಬೇಕೆಂದು ಆಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

