ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ವತಿಯಿಂದ ನಡೆಯುತ್ತಿರುವ ಅಗ್ನಿವೀರ್ ನೇಮಕಾತಿ ರ‍್ಯಾಲಿಯ ೨ನೇ ದಿನದ ನೇಮಕಾತಿ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪರಿಶೀಲಿಸಿದರು.
ನೇಮಕಾತಿ ರ‍್ಯಾಲಿಯ ೨ನೇ ದಿನದ ಪ್ರಕ್ರಿಯೆಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಚಾಲನೆ ನೀಡಿದರು.
ಬಳಿಕ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಅಭ್ಯರ್ಥಿಗಳ ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯೆಯನ್ನು ವೀಕ್ಷಿಸಿ, ಸಂಬAಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿವೀರ್ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುತ್ತಿರುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಜಿಲ್ಲಾಡಳಿತದ ವತಿಯಿಂದ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಸುಗಮ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನಿಗದಿತ ನಿಯಮಗಳನ್ನು ಪಾಲಿಸಿ, ನೇಮಕಾತಿ ಪ್ರಕ್ರಿಯೆ ಸುಗಮವಾಗಿ ನಡೆಯಲು ಅಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಂಗಳೂರು ಆರ್ಮಿ ರಿಕ್ರೂಟ್‌ಮೆಂಟ್ ಕಚೇರಿಯ ಕರ್ನಲ್ ಜಿ. ಸೋಮು ಮಹಾರಾಜನ್ ಅವರು ಅಗ್ನಿವೀರ್ ನೇಮಕಾತಿ ರ‍್ಯಾಲಿಯ ವಿವಿಧ ಹಂತಗಳು ಹಾಗೂ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರಿಗೆ ಮಾಹಿತಿ ನೀಡಿದರು.

