ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿಕೆ | ವಿದ್ಯಾರ್ಥಿಗಳಿಂದ ವಿಧಾನಸಭೆ ಕಲಾಪದ ಪ್ರದರ್ಶನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಮುದಾಯಕ್ಕೆ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸುವ ಉದ್ದೇಶದಿಂದ ಸೆ.೧೫ ರಂದು ಯುವ ಸಂಸತ್ತು ಸಭೆಗೆ ಚಾಲನೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ತಿಳಿಸಿದರು.
ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ಯುವಕರಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿ ಮಾನವ ಸರಪಳಿ ಹಾಗೂ ಬೈಕ್ ರ‍್ಯಾಲಿಗಳ ಬದಲಾಗಿ ಯುವ ಸಂಸತ್ತು ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸೆ.೧೫ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮುಖ್ಯ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ತಿಳಿಸಿದ್ದಾರೆ.
ಸೆ. ೧೬ರಿಂದ ನ. ೨೬ರವರೆಗೆ ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಮುಂದುವರಿಯಲಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಕ್ಟೋಬರ್ ೧೦ರೊಳಗೆ ಯುವ ಸಂಸತ್ತು ಆಯೋಜಿಸಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಸೆ.೧೫,ರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಪ್ರಜಾಪ್ರಭುತ್ವದ ಮಹತ್ವ ಸಾರುವ ಉಪನ್ಯಾಸ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕರ್ನಾಟಕ ವಿಧಾನಸಭೆಯ ಮಾದರಿಯಲ್ಲಿ ಯುವ ಸಂಸತ್ತನ್ನು ರಚಿಸಲಾಗುತ್ತಿದ್ದು, ಸ್ಥಳಾವಕಾಶಕ್ಕೆ ಅನುಗುಣವಾಗಿ ೨೨೪ ಅಥವಾ ಕನಿಷ್ಠ ೧೧೨ ವಿದ್ಯಾರ್ಥಿಗಳನ್ನು ಒಳಗೊಳ್ಳುವಂತೆ ಕ್ರಮವಹಿಸಲಾಗುತ್ತದೆ. ವಿದ್ಯಾರ್ಥಿಗಳು ವಿಧಾನಸಭೆಯ ಕಲಾಪದ ಮಾದರಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದವರು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿಷಯ ತಜ್ಞರು ಮತ್ತು ಸಂಪನ್ಮೂಲ ವ್ಯಕ್ತಿಗಳಿಂದ ವಿಚಾರ ಸಂಕಿರಣ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಅಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ವಿದ್ಯಾರ್ಥಿಗಳ ಆಯ್ಕೆ, ತರಬೇತಿ, ಪೂರ್ವಾಭ್ಯಾಸ ಹಾಗೂ ಯುವ ಸಂಸತ್ತಿನ ಕಲಾಪಗಳನ್ನು ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ನಿರ್ದೇಶನ ನೀಡಿದರು.
ವೀಡಿಯೊ ಸಂವಾದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ವಡ್ಡರ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ವಿಜಯಕುಮಾರ ಆಜೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

