ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವುದರ ಜೊತೆಗೆ ಗ್ರಾಮೀಣ ಭಾಗದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಉತ್ತಮ ವೇದಿಕೆ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಚೆನ್ನಯ್ಯ ಮಠಪತಿ ಹೇಳಿದರು.
ತಾಲ್ಲೂಕಿನ ಕನಮಡಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ನಿರಂತರ ಅಭ್ಯಾಸ, ಶಿಸ್ತು ಹಾಗೂ ಆತ್ಮವಿಶ್ವಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಶಿಕ್ಷಣದ ಜತೆಗೆ ಕ್ರೀಡೆಗೂ ವಿದ್ಯಾರ್ಥಿಗಳು ಸಮಾನ ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ದೊರೆತರೆ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಅಂತಹ ಪ್ರತಿಭೆಗಳನ್ನು ಆರಂಭದಲ್ಲಿಯೇ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರು, ಪೋಷಕರು ಹಾಗೂ ಸಮಾಜದ ಮೇಲಿದೆ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ಕನಮಡಿ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಬಾಬುಗೌಡ ಬಿರಾದಾರ್, ಆರ್.ಎಸ್. ಪಾಟೀಲ, ಶ್ರೀಶೈಲ ವಿರಕ್ತಮಠ, ಪ್ರಕಾಶ್‌ಗೌಡ ಬಿರಾದಾರ್, ಶಿವಪ್ಪ ಮುನ್ನೋಳಿ, ಬಿ.ಕೆ. ನಾಟಿಕರ್, ವಿ.ವಿ. ಬಿರಾದಾರ್, ಸುಧೀರ್ ಹಳ್ಳಿಯಾಳ, ಬಿ.ಪಿ. ಪಾಟೀಲ, ಎಂ.ಎಂ. ಮಠಪತಿ, ಸದಾಶಿವ ಕುಂಬಾರ, ಆರ್.ವೈ. ಗೋಳಸಂಗಿ, ಎ.ಎ. ಪಾಟೀಲ ಸೇರಿದಂತೆ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯಗುರು ಸುನೀಲ ಬಿರಾದಾರ್ ಕಾರ್ಯಕ್ರಮ ನಿರೂಪಿಸಿದರು. ಸಿಆರ್‌ಪಿ ಅನಿಲ ಕೋಟ್ಯಾಳ ಸ್ವಾಗತಿಸಿದರು.

