ಕರ್ನಾಟಕಕ್ಕೆ ಮುಂದುವರಿದ ಸಂಕಷ್ಟ | ನಿತ್ಯ 2,600 ಕ್ಯೂಸೆಕ್ ನೀರು ಬಿಡುವಂತೆ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನ.1ರಿಂದ 15ರವರೆಗೆ ಪ್ರತಿದಿನ 2,600 ಕ್ಯೂಸೆಕ್ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.
ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಆದೇಶವನ್ನು ನೀಡಲಾಗಿದೆ. ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.
ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡುತ್ತಿದೆ. ಈ ಹಿಂದೆ ಅಕ್ಟೋಬರ್ 15ರಿಂದ 31ರ ವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಆದೇಶ ಹೊರಡಿಸಿತ್ತು.
ಅದಕ್ಕೂ ಮೊದಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಾಗಿತ್ತು. ಸುಪ್ರೀಂಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.
ಇದಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಕರ್ನಾಟಕದ ಸಂಸದರು ಮತ್ತು ಸಚಿವರ ಜೊತೆ ಸಭೆ ನಡೆಸಿದ್ದರು. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದರು.