ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವುದು ಹಾಗೂ ತಾಲೂಕು ಕೇಂದ್ರ ದೇವರಹಿಪ್ಪರಗಿ ಪಟ್ಟಣದಲ್ಲಿ ಬಸ್ ಡಿಪೋ ಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಪದಾಧಿಕಾರಿಗಳು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಕೈಗೊಂಡು ಸಾರಿಗೆ ನಿಯಂತ್ರಣಾಧಿಕಾರಿ ಶೇಖರ ಕಡಕೋಳರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಬಸ್ ನಿಲ್ದಾಣದಕ್ಕೆ ಮಂಗಳವಾರ ಆಗಮಿಸಿದ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಪದಾಧಿಕಾರಿಗಳು ಪ್ರತಿಭಟನೆ ಕೈಗೊಂಡರು.
ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ರಹೀಮಾನ್ ಕನಕಲ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಹಾಗೂ ಸಾರ್ವಜನಿಕರು ಪ್ರತಿನಿತ್ಯ ಸಾರಿಗೆ ಸಮಸ್ಯೆ ಎದುರಿಸುತ್ತಿದ್ದು, ಹಲವು ಗ್ರಾಮಗಳಿಗೆ ಸಮರ್ಪಕ ಬಸ್ ಸಂಚಾರವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಗ್ರಾಮೀಣ ಮಾರ್ಗಗಳಿಗೆ ಹೆಚ್ಚಿನ ಬಸ್‌ಗಳನ್ನು ಓಡಿಸಬೇಕು, ಬಸ್ ನಿಲ್ದಾಣದ ಮುಂದಿನ ಗಾರ್ಡನ್ ಸ್ವಚ್ಛಗೊಳಿಸಬೇಕು, ಪಾರ್ಕಿಂಗ್ ವ್ಯವಸ್ಥೆ ಹಾಗೂ ತಾಲೂಕು ಕೇಂದ್ರ ದೇವರಹಿಪ್ಪರಗಿಯಲ್ಲಿ ಬಸ್ ಡಿಪೋ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಶಿವರಾಜ್ ತಳವಾರ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಬರುವಂತ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಒತ್ತಾಯಿಸಿದರು.
ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅಮೀದ ಮುಲ್ಲಾ, ಉಪಾಧ್ಯಕ್ಷ ಅಬೂಬಕರ ಯಲಗಾರ, ಕಾರ್ಮಿಕ ಘಟಕದ ಉಪಾಧ್ಯಕ್ಷ ಅಜೀಮ್ ಪಟೇಲ, ಪಂಚಸೇನಾ ತಾಲ್ಲೂಕು ಘಟಕದ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ, ಯಾಕೂಬ್ ಶಹಪೂರ, ನಬಿಲಾಲ ಚಿಕ್ಕಸಿಂದಗಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

