ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಜಾವೇದ್ ಜಮಾದಾರ್ ಮಾತನಾಡಿ, ಜಿಲ್ಲೆಯ ೧೩ ತಾಲ್ಲೂಕುಗಳಲ್ಲಿ ನಡೆದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡೆಯಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಸರು ತರಬೇಕು ಎಂದು ಹೇಳಿದರು.
ನಾಗರಾಜ ಲಂಬು ಅವರು ಮಾತನಾಡಿ, ಜೀವನದಲ್ಲಿ ಕಲಿಕೆಗೆ ನೀಡುವಷ್ಡೇ ಮಹತ್ವವನ್ನು ಕ್ರೀಡೆಗೂ ನೀಡಿ ಸದಾ ಕ್ರಿಯಾ ಶೀಲರಾಗಿರಲು ವ್ಯಾಯಾಮ, ಯೋಗ ಹಾಗೂ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅಗತ್ಯ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಬೋವಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವುದು ಮುಖ್ಯ ಎಂದು ಅವರು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ರವಿಕುಮಾರ, , ಹನುಮಂತ ರಾಮಪುರ, ರವಿಕುಮಾರ ವಾಲಿ, ಪ್ರಿಯಾಂಕಾ, ದೈಹಿಕ ಶಿಕ್ಷಣ ಶಿಕ್ಷಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.

