ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮನವಿ ಸಲ್ಲಿಕೆ
ಉದಯರಶ್ಮಿ ದಿನಪತ್ರಿಕೆ
ಅಫಜಲಪುರ: 2013ರ ಮಹದಾಯಿ ನೀರಾವರಿ ಹೋರಾಟಕ್ಕೆ ಸಂಬಂಧಿಸಿದ ಹಳೆಯ ಪ್ರಕರಣದಲ್ಲಿ ಬಂಧಿತರಾಗಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಫಜಲಪುರ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ನಾಯ್ಕೋಡಿ ಅವರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಹದಾಯಿ ಹಾಗೂ ಕಳಸಾ-ಬಂಡೂರಿ ನೀರಿಗಾಗಿ ನಡೆದ ಹೋರಾಟವು ಉತ್ತರ ಕರ್ನಾಟಕದ ರೈತರ ಬಹುದಿನಗಳ ಬೇಡಿಕೆಯಾಗಿದ್ದು, ಹೋರಾಟದ ಸಂದರ್ಭದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಮಾನವೀಯ ಹಾಗೂ ರೈತಪರ ದೃಷ್ಟಿಕೋನದಿಂದ ಮರುಪರಿಶೀಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು, ಮಹದಾಯಿ ಹೋರಾಟ ಸೇರಿದಂತೆ ವಿವಿಧ ರೈತ ಚಳುವಳಿಗಳಿಗೆ ಸಂಬಂಧಿಸಿದ ಹಳೆಯ ಪ್ರಕರಣಗಳನ್ನು ಹಿಂಪಡೆಯಬೇಕು, ರೈತ ಹೋರಾಟಗಾರರ ಮೇಲಿರುವ ಪ್ರಕರಣಗಳನ್ನು ಮರು ಪರಿಶೀಲಿಸಬೇಕು ಹಾಗೂ ರೈತರ ನ್ಯಾಯಯುತ ಬೇಡಿಕೆಗಳಿಗಾಗಿ ನಡೆಯುವ ಶಾಂತಿಯುತ ಹೋರಾಟಗಳನ್ನು ಗೌರವಿಸಬೇಕು ಎಂದು ಆಗ್ರಹಿಸಲಾಗಿದೆ.ಇದಲ್ಲದೆ, ರೈತರ ಸಮಸ್ಯೆಗಳನ್ನು ಸಂವಾದದ ಮೂಲಕ ಪರಿಹರಿಸಲು ಸರ್ಕಾರ ಮುಂದಾಗಬೇಕು. ರೈತ ಹೋರಾಟಗಾರರ ಮೇಲಿರುವ ಸೂಕ್ತ ಪ್ರಕರಣಗಳನ್ನು ಹಿಂಪಡೆಯಲು ಅಗತ್ಯ ಕಾನೂನು ಹಾಗೂ ಆಡಳಿತಾತ್ಮಕ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಮಂಜುನಾಥ ನಾಯ್ಕೋಡಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

