ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸಿದ ಹಲವು ಇಲಾಖೆ ಅಧಿಕಾರಿಗಳಿಗೆ ದಂಡ ವಿಧಿಸಿ, ಇಲಾಖಾ ವಿಚಾರಣೆಗೆ ಶಿಫಾರಸು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ್ ನಾರಾಯಣ ಚನ್ನಾಳ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ನಮ್ಮ ರಾಷ್ಟ್ರದ ಬೆನ್ನೆಲುಬಾದ ರೈತ ಸಮುದಾಯ ಮತ್ತು ಯೋಧರ ಕುಟುಂಬಸ್ಥರ ಅರ್ಜಿಗಳಿಗೆ ನಿಗದಿತ ಸಮಯದಲ್ಲಿ ಸೂಕ್ತ ಮಾಹಿತಿ ನೀಡುವುದು ಅತ್ಯಂತ ಅಗತ್ಯವಾಗಿದೆ. ಮಾಹಿತಿ ಹಕ್ಕು ಕಾಯ್ದೆಯು ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಕಾಯ್ದುಕೊಳ್ಳುವ ಪ್ರಮುಖ ಕಾಯ್ದೆಯಾಗಿದೆ ಎಂದವರು ಹೇಳಿದ್ದಾರೆ.
ಅನ್ನದಾತ ರೈತರು ಮತ್ತು ಯೋಧರ ಕುಟುಂಬಗಳ ಅರ್ಜಿಗಳಿಗೆ ಅಧಿಕಾರಿಗಳು ಕಾಲಮಿತಿಯೊಳಗೆ ಸ್ಪಂದಿಸಿ ಸರಿಯಾದ ಮಾಹಿತಿ ನೀಡಬೇಕು. ಒಂದು ವೇಳೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ದಂಡ ವಿಧಿಸಲಾಗುವುದು ಎಂದು ಮಾಹಿತಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದಾರೆ.
