ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಮೂರು ವಿಭಾಗಗಳ ವಿಜೇತರ ಪಟ್ಟಿ ಪ್ರಕಟ | ಅ.೨ರಂದು ಗಾಂಧಿ ಜಯಂತಿ ಸಮಾರಂಭದಲ್ಲಿ ಬಹುಮಾನ, ಪ್ರಮಾಣಪತ್ರ ವಿತರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ೧೫೭ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮಾ ಗಾಂಧೀಜಿಯವರ ಬದುಕು, ಸ್ವಾತಂತ್ರ‍್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ಒಟ್ಟು ೩ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿತ್ತು.
ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ–ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ವಿವರಗಳನ್ನು ಪ್ರಕಟಿಸಿಲಾಗಿದೆ.
ಪ್ರೌಢಶಾಲಾ ವಿಭಾಗ: ಸಿಂದಗಿ ತಾಲ್ಲೂಕಿನ ಸುರಗಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ಪ್ರೇಮಾ ಕೆ. ಬಿರಾದಾರ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯಪುರದ ಜಲನಗರ ಸರ್ಕಾರಿ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿನಿ ರೇಣುಕಾ ಎಂ. ಕೆಸ್ಕಾರ ದ್ವಿತೀಯ ಹಾಗೂ ಕೆರೂಟಗಿಯ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಬಿರಾದಾರ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿ ಪೂರ್ವ ಕಾಲೇಜು ವಿಭಾಗ: ಮುದ್ದೇಬಿಹಾಳದ ಹಾರ್ವರ್ಡ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ವಲ ಎನ್. ಹರಿಂದ್ರಾಳ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜಯಪುರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೀನಾ ಕೌಸರ್ ಮೂಲಿಮನಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಬಲೇಶ್ವರದ ಎಸ್.ಎಸ್. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ದಡ್ಡಿಮನಿ ಹಾಗೂ ಕೂಡಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಾನೇಶ್ವರಿ ತೆಲಗಿ ತೃತೀಯ ಸ್ಥಾನ ಪಡೆದಿದ್ದಾರೆ.
ಪದವಿ, ಸ್ನಾತಕೋತ್ತರ ಪದವಿ ವಿಭಾಗ: ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಮಡ್ಡಪ್ಪ ಕರೀಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಝಳಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ವಿದ್ಯಾರ್ಥಿನಿ ಸಂಗೀತಾ ಮೇಟಿ ಹಾಗೂ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಂ.ಎ. ವಿದ್ಯಾರ್ಥಿನಿ ಸಾವಿತ್ರಿ ಗಿಡ್ಡಪ್ಪಗೋಳ ದ್ವಿತೀಯ ಸ್ಥಾನ ಪಡೆದರೆ, ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್ಸಿ. ವಿದ್ಯಾರ್ಥಿನಿ ಸ್ಮೀತಾ ದೋಬಾಳೆ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ಅಕ್ಟೋಬರ್ ೨ರಂದು ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯುವ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಸಮಾರಂಭದಲ್ಲಿ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

