ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಸದ್ಬಳಕೆಯಿಂದ ಜನರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಅವರು ಹೇಳಿದರು.
ನಗರದ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಯೋಜನೆಗಳು ಜನರ ಆರ್ಥಿಕ ಸಬಲೀಕರಣಗೊಂಡ, ಮಹಿಳೆಯರ ಸ್ವಾವಲಂಬಿ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳಿಂದ ದೊರೆಯುವ ಆರ್ಥಿಕ ನೆರವನ್ನು ಕುಟುಂಬದ ಅಗತ್ಯಗಳಿಗೆ, ಮಕ್ಕಳ ಶಿಕ್ಷಣಕ್ಕೆ ಹಾಗೂ ಸಣ್ಣ ಉದ್ಯಮಗಳ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಂಡು ಆರ್ಥಿಕ ಸ್ವಾಲಂಬನೆ ಸಾಧಿಸಬೇಕು ಎಂದರು.
ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಜನರಿಗೆ ಆರ್ಥಿಕ ಆಸರೆ ಒದಗಿ, ಆರ್ಥಿಕ ನೆರವು ದೊರೆಯುತ್ತಿದ್ದು, ಜನರ ಜೀವನ ನಿರ್ವಹಣೆಗೆ ಸಹಕಾರಿಯಾಗಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಸುಮಾರು ೫೨ ಸಾವಿರ ಕೋಟಿ ರೂ. ಅನುದಾನ ವ್ಯಯಮಾಡಲಾಗಿದೆ. ಈ ಯೋಜನೆಗಳಿಂದ ತಲಾ ಆದಾಯ ಹೆಚ್ಚಳಕ್ಕೂ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನಗರಾಧ್ಯಕ್ಷ ಶಬ್ಬೀರ ಜಾಗೀರದಾರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸಂತೋಷ್ ಎಚ್. ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಬ್ಲಾಕ್ ಮಟ್ಟದ ಸದಸ್ಯರಾದ ಬಬಲು ಪೀರಜಾದೆ, ಸಂತೋಷ ಚವ್ಹಾಣ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.

