ನಮ್ಮ ಗ್ರಾಮ–ನಮ್ಮ ನ್ಯಾಯ ಪರಿಕಲ್ಪನೆ ಸಾಕಾರಗೊಳಿಸಲು ನ್ಯಾಯಾಧೀಶ ಅರವಿಂದ ಹಾಗರಗಿ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮಗಳಲ್ಲಿ ಉಂಟಾಗುವ ಕಾಲುದಾರಿ, ಬಂಡಿದಾರಿ, ನಾಲೆನೀರು, ಕೌಟುಂಬಿಕ ಸೇರಿದಂತೆ ಸಣ್ಣಪುಟ್ಟ ವ್ಯಾಜ್ಯಗಳನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವ ಬದಲು ಸಮುದಾಯ ಮಧ್ಯಸ್ಥಿಕೆಯ ಮೂಲಕ ಗ್ರಾಮದಲ್ಲೇ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕತನಕಹಳ್ಳಿ ಸಮುದಾಯ ಮಧ್ಯಸ್ಥಿಕೆ ಕೇಂದ್ರದ ಸಹಯೋಗದಲ್ಲಿ ಮಂಗಳವಾರ ಕತನಕಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮುದಾಯ ಮಧ್ಯಸ್ಥಿಕೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಸಣ್ಣಪುಟ್ಟ ವಿಚಾರಗಳು ಕೆಲವೊಮ್ಮೆ ವಿವಾದಗಳಾಗಿ ಬೆಳೆಯುವ ಸಾಧ್ಯತೆಯಿದ್ದು, ಅಂತಹ ಸಮಸ್ಯೆಗಳನ್ನು ಆರಂಭದಲ್ಲಿಯೇ ಪರಸ್ಪರ ಚರ್ಚೆ ಹಾಗೂ ಸಮಾಲೋಚನೆಯ ಮೂಲಕ ಬಗೆಹರಿಸಿಕೊಳ್ಳುವುದು ಸೂಕ್ತ. ಸಮುದಾಯ ಮಧ್ಯಸ್ಥಿಕೆ ವ್ಯವಸ್ಥೆಯು ಇಂತಹ ವಿವಾದಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಉತ್ತಮ ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು.
ಲಭ್ಯವಿರುವ ಸಮುದಾಯ ಮಧ್ಯಸ್ಥಿಕೆ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು. ನಮ್ಮ ಗ್ರಾಮ–ನಮ್ಮ ನ್ಯಾಯ ಎಂಬ ಆಶಯದೊಂದಿಗೆ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕತನಕಹಳ್ಳಿ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದು, ಸಮುದಾಯ ಮಧ್ಯಸ್ಥಿಕೆ ಹಾಗೂ ಕಾನೂನು ಸೇವೆಗಳ ಕುರಿತು ಮಾಹಿತಿ ಪಡೆದುಕೊಂಡರು.

