ವಿಜಯಪುರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜೀವನದ ಮುಸ್ಸಂಜೆಯಲ್ಲಿರುವ ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಆಸ್ತಿ. ಅವರ ಜೀವನಾನುಭವ, ಜ್ಞಾನ ಮತ್ತು ಮಾರ್ಗದರ್ಶನ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ದೀರ್ಘಾಯುಷ್ಯದ ಯುಗ, ಸುದೀರ್ಘ ಜೀವನಕ್ಕಾಗಿ ಜೀವನ ಕ್ರಮಗಳ ಮರುಚಿಂತನೆ ಧ್ಯೇಯ ವಾಕ್ಯದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಜನಾಂಗ ಹಿರಿಯರ ನಾಗರಿಕರ ಅನುಭವ ಹಾಗೂ ಅವರ ಜೀವನದ ಮೌಲ್ಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳುವುದರೊಂದಿಗೆ ಅವರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದ ಅವರು, ಹಿರಿಯರ ನಾಗರಿಕರ ಬೇಕು-ಬೇಡಿಕೆಗಳ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಹಿರಿಯರೊಂದಿಗೆ ಇರುತ್ತದೆ ಎಂದು ಅರವಿಂದ ಹಾಗರಗಿ ಭರವಸೆ ನೀಡಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಎಸ್. ಪಿ. ಬಿರಾದಾರ ಕಡ್ಲೇವಾಡ ಅವರು ಅಧ್ಯಕ್ಷತೆ ವಹಿಸಿದ್ದರು.
ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸಂತೋಷ ಎಚ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಬಿ.ಎಲ್.ಡಿ.ಇ. ಸಂಸ್ಥೆಯ ಹಿರಿಯ ನಾಗರಿಕರ ಸೇವಾ ವಿಭಾಗದ ಡಾ. ಅಂಬ್ಲಿಗಿ ಮಾತನಾಡಿ, ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಎಸ್.ಎಲ್. ಇಂಗಳೇಶ್ವರ ಹಾಗೂ ಡಿವೈಎಸ್ಪಿ ಮುರಿಗೆಪ್ಪ ಉಪಾಸೆ ಮಾತನಾಡಿದರು.
ವಿಶ್ರಾಂತ ಪ್ರಾಚಾರ್ಯ ಎಸ್.ಎಸ್. ಬಸವರೆಡ್ಡಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಗದೀಶ ಕೆ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಿವೃತ್ತ ನೌಕರರ ಸಂಘದ ಪ್ರತಿನಿಧಿಗಳು, ಹಿರಿಯ ನಾಗರಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಜೇತ ಹಿರಿಯ ನಾಗರಿಕರಿಗೆ ಪ್ರಶಸ್ತಿ
ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆ ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಹಿರಿಯ ನಾಗರಿಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ನಾಗರಿಕರನ್ನು ಇದೇ ವೇಳೆ ಸನ್ಮಾನಿಸಿ ಗೌರವಿಸಲಾಯಿತು.
ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ ಹಿರಿಯ ನಾಗರಿಕರಿಗೆ ಮಧುಮೇಹ ಮತ್ತು ರಕ್ತದೊತ್ತಡಗಳನ್ನು ಉಚಿತ ತಪಾಸಣೆ ನಡೆಸಿದರು.

