ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಹಾಗೂ ಮಹಿಳಾ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರವಾಗಿ ಖಂಡಿಸಿದೆ.
ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ಖಂಡನೀಯ. ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿರುವುದು ಆತಂಕಕಾರಿ ಎಂದು ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಹಾಗೂ ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ವೃತ್ತಿಪರ ಕರ್ತವ್ಯ ನಿರ್ವಹಿಸಲು ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

