ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಕನ್ನಡ ನಾಡು, ನುಡಿ, ಜಲ ಹಾಗೂ ಕನ್ನಡ ಸಂಸ್ಕೃತಿಯ ವೈಭವವನ್ನು ಸಾರುವ ಉದ್ದೇಶದಿಂದ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣಶೆಟ್ಟಿ ಬಣ) ಹಾಗೂ ಎ.ಆರ್.ಕೆ ಫೌಂಡೇಶನ್ ವತಿಯಿಂದ ನವೆಂಬರ್ ೨ ರಂದು ಕನ್ನಡಹಬ್ಬ ಅದ್ದೂರಿ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಶ್ರೀಶೈಲ ಮುಳಜಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ನ.೨ ಸೋಮವಾರ ಅಂಬೇಡ್ಕರ್ ವೃತ್ತದಿಂದ ಮೊಹರೆ ಹಣಮಂತ್ರಾಯ ವೃತ್ತದ ಮಾರ್ಗವಾಗಿ ಟಿಪ್ಪುಸುಲ್ತಾನ್ ವೃತ್ತದವರೆಗೆ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಯಾಗದೆ, ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯ ಬಗ್ಗೆ ಅಭಿಮಾನ ಬೆಳೆಸುವ ವೇದಿಕೆಯಾಗಬೇಕು. ಈ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಕರವೇ ತಾಲ್ಲೂಕು ಅಧ್ಯಕ್ಷ ರಹೀಮಾನ ಕನಕಲ್ ಮಾತನಾಡಿ, ನ.೨ರಂದು ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜಕೀಯ ಗಣ್ಯರು, ಸಾಹಿತಿಗಳು, ಕಲಾವಿದರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಪಟ್ಟಣದ ಪರದೇಶಿಮಠಶ್ರೀ, ಸಿಂದಗಿ ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಸಿದ್ದಾರ್ಥ್ ರೂಗಿ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಜಲಪೂರ ಮಾತನಾಡಿ, ಕನ್ನಡದ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕರವೇ ಗೌರವಾಧ್ಯಕ್ಷ ಸಾಹೇಬಗೌಡ ಉತ್ನಾಳ, ಪದಾಧಿಕಾರಿಗಳಾದ ಅಮೀದ ಮುಲ್ಲಾ, ಅಬೂಬಕರ್ ಯಲಗಾರ, ಮಲ್ಲಿಕಾರ್ಜುನ ಬಿರಾದಾರ, ನಬಿಲಾಲ ಚಿಕ್ಕಸಿಂದಗಿ, ಗುರುಪಾದ ಮಣೂರ ಇದ್ದರು.

