ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕನ ಸಹಭಾಗಿತ್ವ ಅಗತ್ಯವಾಗಿದ್ದು, ಸ್ವಚ್ಛತೆಯನ್ನು ಕೇವಲ ಅಭಿಯಾನಕ್ಕೆ ಸೀಮಿತಗೊಳಿಸದೆ ಜೀವನದ ಅವಿಭಾಜ್ಯ ಭಾಗವನ್ನಾಗಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಹೇಳಿದರು.
ತಾಲ್ಲೂಕಿನ ಕನಮಡಿ ಗ್ರಾಮದಲ್ಲಿ ರವಿವಾರ ಕರ್ನಾಟಕ ಸರ್ಕಾರದ ಸ್ವಚ್ಛತಾ ಅಭಿಯಾನ 2026ರ ಅಂಗವಾಗಿ ಹಾಗೂ ಸಚಿವ ಎಂ.ಬಿ. ಪಾಟೀಲ ಅವರ ಸದಾಶಯದಂತೆ ಕನಮಡಿ ಗ್ರಾಮ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ‘ಸ್ವಚ್ಛತೆಯೆಡೆಗೆ ಹಳ್ಳಿಯ ನಡಿಗೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡಾ ಮತ್ತು ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ್ ಧೈವಾಡಿ ಮಾತನಾಡಿ ಸ್ವಚ್ಛತೆ ಎಂಬುದು ಕೇವಲ ಕಸವನ್ನು ಗುಡಿಸಿ ಸ್ವಚ್ಛಗೊಳಿಸುವ ಕಾರ್ಯವಲ್ಲ. ಸ್ವಚ್ಛತೆಯ ಬಗ್ಗೆ ಜನರಲ್ಲಿ ಜವಾಬ್ದಾರಿ ಮತ್ತು ಜಾಗೃತಿ ಮೂಡಿಸುವ ಸಾಮಾಜಿಕ ಚಳವಳಿಯಾಗಿದೆ. ನಮ್ಮ ಮನೆ ಸ್ವಚ್ಛವಾಗಿರುವಷ್ಟೇ ನಮ್ಮ ಗ್ರಾಮವೂ ಸ್ವಚ್ಛವಾಗಿರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕದಿರುವುದು, ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಹಾಗೂ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಆರು ದಿನಗಳ ಕಾಲ ಗ್ರಾಮದಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಪ್ರಮುಖ ರಸ್ತೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸುವುದರ ಜತೆಗೆ ವಿವಿಧೆಡೆ ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಯ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
ಗ್ರಾಮದ ಪ್ರತಿಯೊಬ್ಬರೂ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸುವ ಮೂಲಕ ನನ್ನ ಮನೆ, ನನ್ನ ಬೀದಿ, ನನ್ನ ಗ್ರಾಮ ಸ್ವಚ್ಛ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂಬ ಸಂದೇಶವನ್ನು ಕಾರ್ಯಕ್ರಮ ಸಾರಿತು.
ಕನಮಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೆಣುಕಾ ಸೋಲಾಪುರ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಶಾಂತ್ ಪಾಟೀಲ, ನೌಕರರ ಸಂಘದ ತಾಲ್ಲೂಕ ಅಧ್ಯಕ್ಷ ಚೆನ್ನಯ್ಯ ಮಠಪತಿ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

