ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಬಲೇಶ್ವರದಲ್ಲಿ ಸಬ್ ರಜಿಸ್ಟ್ರಾರ್ ಕಚೇರಿ ಪ್ರಾರಂಭಿಸಲು ಸರಕಾರ ಆದೇಶ ಹೊರಡಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ಪಟ್ಟಣದಲ್ಲಿ ಉಪನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಈ ಹಿಂದೆ ಕಂದಾಯ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದೆ. ಈಗ ಸರಕಾರ ಸಬ್ ರಜಿಸ್ಟ್ರಾರ್ ಕಚೇರಿ ಪ್ರಾರಂಭಿಸಲು ಮತ್ತು ಕಚೇರಿಯ ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಹಾಗೂ ಪೀಠೋಪಕರಣಗಳನ್ನು ಒದಗಿಸಿ ಆದೇಶ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಇದರಿಂದ ಬಬಲೇಶ್ವರ ತಾಲೂಕಿನ ರೈತರು ಮತ್ತು ಸಾರ್ವಜನಿಕರಿಗೆ ಜಮೀನು, ಕಟ್ಟಡ ಮಾರಾಟ ಮಾಡಲು ಹಾಗೂ ಖರೀದಿ ಮಾಡಲು ಅನುಕೂಲವಾಗಲಿದೆ. ನೋಂದಣಿಗೆ ವಿಜಯಪುರಕ್ಕೆ ಅಲೆದಾಡುವುದು ತಪ್ಪಲಿದೆ. ಅಲ್ಲದೇ ಸಮಯವೂ ಉಳಿತಾಯವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

