೧೩ ಖರೀದಿ ಕೇಂದ್ರಗಳಲ್ಲಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ₹೮,೩೪೩ ಬೆಂಬಲ ಬೆಲೆಯಲ್ಲಿ ಖರೀದಿಸಲು ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ರೈತರ ನೋಂದಣಿಗೆ ೮೦ ದಿನಗಳು ಹಾಗೂ ಖರೀದಿ ಪ್ರಕ್ರಿಯೆಗೆ ೯೦ ದಿನಗಳ ಅವಧಿ ನಿಗದಿಪಡಿಸಲಾಗಿದೆ.
ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿಗಾಗಿ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ವಿಜಯಪುರ, ಮುದ್ದೇಬಿಹಾಳ, ತಾಳಿಕೋಟಿ, ತಂಗಡಗಿ, ಇಂಡಿ, ಚಡಚಣ, ಹಲಸಂಗಿ, ಸಿಂದಗಿ ಹಾಗೂ ಬಸವನಬಾಗೇವಾಡಿ ಸೇರಿದಂತೆ ಒಟ್ಟು ೧೩ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರ ಸರ್ಕಾರದ ಖರೀದಿ ಏಜೆನ್ಸಿಗಳಾಗಿ ನಾಫೆಡ್ ಹಾಗೂ ಎನ್‌ಸಿಸಿಎಫ್ ಸಂಸ್ಥೆಗಳನ್ನು ಮತ್ತು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಸಂಸ್ಥೆಯನ್ನು ನೇಮಿಸಲಾಗಿದೆ. ಖರೀದಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಸಂಬಂಧಿಸಿದ ಜಿಲ್ಲಾ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ.
ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೪ ಕ್ವಿಂಟಾಲ್ ಹಾಗೂ ಒಬ್ಬ ರೈತನಿಂದ ಗರಿಷ್ಠ ೨೦ ಕ್ವಿಂಟಾಲ್ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಂತಿಯನ್ನು ಖರೀದಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು. ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಯನ್ವಯ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ಮೂರು ದಿನಗಳೊಳಗಾಗಿ ರೈತರ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಜಮೆ ಮಾಡುವಂತೆ ನಿರ್ದೇಶನ ನೀಡಲಾಯಿತು. ಆವರ್ತನಿಧಿಗೆ ಸಂಬAಧಿಸಿದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಯಿತು.
ಜಿಲ್ಲೆಯಲ್ಲಿ ಪ್ರಸಕ್ತ ೬,೬೪೧ ಹೆಕ್ಟೇರ್ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು ೭೯,೬೯೨ ಕ್ವಿಂಟಾಲ್ ಇಳುವರಿ ನಿರೀಕ್ಷಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಸೂರ್ಯಕಾಂತಿ ಪ್ರತಿ ಕ್ವಿಂಟಾಲ್‌ಗೆ ₹೭,೦೦೦ರಿಂದ ₹೭,೩೦೦ರ ವರೆಗೆ ಮಾರಾಟವಾಗುತ್ತಿರುವುದಾಗಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಹೀಗಾಗಿ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹೮,೩೪೩ ದೊರೆಯಲಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.
ಸಭೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು, ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ (ಕೆಒಎಫ್) ಜಿಲ್ಲಾ ವ್ಯವಸ್ಥಾಪಕರು, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ಸಂಬಂಧಿಸಿದ ಮೂರು ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಈ ಕುರಿತು ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
