ವಿಜಯಪುರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಲಜೀವನ್ ಮಿಷನ್ ಸೇರಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅ.5ರಂದು ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಘಟಕಾಂಶಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಟಾಸ್ಕ್‌ಫೋರ್ಸ್ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅನಗತ್ಯವಾಗಿ ಹೊಸ ಕೊಳವೆಬಾವಿಗಳನ್ನು ಕೊರೆಯಿಸುವುದನ್ನು ಕಡಿಮೆ ಮಾಡಿ, ಈಗಾಗಲೇ ಕೊರೆಯಿಸಿರುವ ಕೊಳವೆಬಾವಿಗಳಿಗೆ ಆದ್ಯತೆಯ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು. ಗ್ರಾಮಸ್ಥರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯದಿಂದ ಪ್ರತಿ ವಾರ ಸಭೆ ನಡೆಸಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಅಂತಹ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ ಜಿಲ್ಲಾ ಪಂಚಾಯತಿಗೆ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವರ್ಧಮಾನ ಗೊಂಗಡಿ, ಇಲಾಖೆಯ ವಿವಿಧ ಉಪವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಜಲಧಾರೆ ಯೋಜನೆಯ ಪಿಎಂಸಿ ತಂಡದ ನಾಯಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
841 ಜಲಜೀವನ್ ಮಿಷನ್ ಕಾಮಗಾರಿಗಳು ಪೂರ್ಣ
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಒಟ್ಟು 1,000 ಕಾಮಗಾರಿಗಳ ಪೈಕಿ 841 ಕಾಮಗಾರಿಗಳು ಪೂರ್ಣಗೊಂಡಿವೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ವೇಗಗೊಳಿಸಿ, ಡಿಸೆಂಬರ್ 2026ರ ಅಂತ್ಯದೊಳಗೆ ಭೌತಿಕವಾಗಿ ಪೂರ್ಣಗೊಳಿಸಬೇಕು ಎಂದು ಆನಂದ್ ಪ್ರಕಾಶ್ ಮೀನಾ ಸೂಚಿಸಿದರು.

