ಹೊನವಾಡ ವಾರ್ಡ್ ನಂ. 2ರಲ್ಲಿ ಮೂಲಸೌಕರ್ಯಗಳ ಕೊರತೆ | ಆಡಿಕಟ್ಟಿ ಓಣಿಯಲ್ಲಿ ಚರಂಡಿ ನೀರು ರಸ್ತೆಗೆ
ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದ ವಾರ್ಡ್ ನಂ. 2ರ ಆಡಿಕಟ್ಟಿ ಓಣಿಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದೆ ಕೊಳಚೆ ನೀರು ರಸ್ತೆಗೆ ಹರಿಯುತ್ತಿದ್ದು, ನಿವಾಸಿಗಳು ಜನರು ಹಾಗೂ ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುವಂತಾಗಿದೆ.
ಚರಂಡಿಗಳು ಹೂಳು ಮತ್ತು ತ್ಯಾಜ್ಯದಿಂದ ತುಂಬಿಕೊಂಡಿರುವ ಪರಿಣಾಮ ಮನೆ ಬಳಕೆಯ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತುಕೊಳ್ಳುತ್ತಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಮಕ್ಕಳು, ವೃದ್ಧರು ಮತ್ತು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವಾಗ ತೊಂದರೆ ಎದುರಿಸುತ್ತಿದ್ದಾರೆ.
ಚರಂಡಿಯ ಅಸಮರ್ಪಕ ಸ್ಥಿತಿ ಹಾಗೂ ಚರಂಡಿಯ ನೀರಿನ ಸಮಸ್ಯೆಯಿಂದ ಸ್ಥಳೀಯರ ಆರೋಗ್ಯ ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗುವ ಆತಂಕ ಎದುರಾಗಿದೆ. ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚರಂಡಿ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳುವುದರ ಜೊತೆಗೆ, ಹದಗೆಟ್ಟ ಚರಂಡಿಯನ್ನು ದುರಸ್ತಿಪಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ವಾರ್ಡ್‌ನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

