ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಶಾಲೆ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಡೆದ ಕುಸ್ತಿ ಸ್ಪರ್ಧೆಯಲ್ಲಿ ಶಾಲೆಯ 45 ಕೆ.ಜಿ. ಗ್ರಿಕೋ ರೋಮನ್ ವಿಭಾಗದಲ್ಲಿ ಪ್ರವೀಣ ಗದಿಗೆಪ್ಪ ಅಡಿಹುಡಿ ದ್ವಿತೀಯ ಸ್ಥಾನ ಪಡೆದು ಉತ್ತಮ ಪ್ರದರ್ಶನ ನೀಡಿದ್ದಾರೆ. ಇದೇ ವೇಳೆ 65 ಕೆ.ಜಿ. ವಿಭಾಗದಲ್ಲಿ ಸಿದ್ಧಲಿಂಗ ಹಣಮಂತ ದಾನಗೌಡ ಪರಿಣಾಮಕಾರಿ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ತಮ್ಮ ಪ್ರತಿಭೆ ಮೆರೆದಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಕಠಿಣ ಪರಿಶ್ರಮ, ನಿರಂತರ ತರಬೇತಿ ಹಾಗೂ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.
ವಿದ್ಯಾರ್ಥಿಗಳ ಸಾಧನೆಗೆ ಗದಗಿನ ಶ್ರೀಗಳು, ಸಂಸ್ಥೆಯ ಕಾರ್ಯದರ್ಶಿಗಳು, ಆಡಳಿತ ಮಂಡಳಿ ಹಾಗೂ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರು, ಚಿಕ್ಕಪಡಸಲಗಿ ಗ್ರಾಮದ ಗುರು-ಹಿರಿಯರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ-ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪದಕದೊಂದಿಗೆ ಮರಳುವ ಮೂಲಕ ಶಾಲೆ, ಗ್ರಾಮ ಹಾಗೂ ಜಮಖಂಡಿ ತಾಲೂಕಿನ ಕ್ರೀಡಾ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಲಿ ಎಂದು ಶುಭ ಹಾರೈಸಿದ್ದಾರೆ.

