ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲೂಕಿನ ಶಿವಪುರ ಗ್ರಾಮದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿಯ ವತಿಯಿಂದ ಗ್ರಾಮಸ್ಥರು ಹಾಗೂ ವಿಶೇಷವಾಗಿ ಮಹಿಳೆಯರೊಂದಿಗೆ ಮಹತ್ವದ ಸಭೆ ನಡೆಸಲಾಯಿತು.
ಸಭೆಯಲ್ಲಿ ಶಿವಪುರ ಗ್ರಾಮದ ಹಲವಾರು ಮಹಿಳೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿ, ತಮ್ಮ ಕುಟುಂಬಗಳು ಮತ್ತು ಗ್ರಾಮದಲ್ಲಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಸಮಿತಿಯ ಗಮನಕ್ಕೆ ತಂದರು.
70 ವರ್ಷ ಮೇಲ್ಪಟ್ಟ ಹಿರಿಯರಿಗೆ ಪಿಂಚಣಿ ಸಿಗದಿರುವುದು, ಅಂಗವಿಕಲರಿಗೆ ಸರ್ಕಾರದ ಅಗತ್ಯ ಸೌಲಭ್ಯಗಳು ದೊರೆಯದಿರುವುದು, ಮನೆ ಇಲ್ಲದ ಬಡ ಕುಟುಂಬಗಳಿಗೆ ಮನೆ ಮಂಜೂರಾಗದಿರುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮನೆ ಮಂಜೂರಾಗಿದ್ದರೂ ಕಾಮಗಾರಿ ಪೂರ್ಣಗೊಂಡ ಬಳಿಕ ಬಿಲ್ ಪಾವತಿಯಾಗದಿರುವ ಸಮಸ್ಯೆಯನ್ನೂ ಗ್ರಾಮಸ್ಥರು ಪ್ರಸ್ತಾಪಿಸಿದರು.
ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಸಮಿತಿ ಮುಖಂಡರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಗಮನಕ್ಕೆ ಸಮಸ್ಯೆಗಳನ್ನು ತಂದು ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಮುಖಂಡರು, ಚುನಾವಣೆಯ ಸಂದರ್ಭದಲ್ಲಿ ಮಾತ್ರ ಜನರನ್ನು ಭೇಟಿ ಮಾಡುವುದಲ್ಲದೆ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಲು ಪ್ರಯತ್ನಿಸುವುದೇ ಜನಸೇವೆಯ ಉದ್ದೇಶವಾಗಿದೆ ಎಂದು ಹೇಳಿದರು.
ಬಡವರು, ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ನಿರ್ಗತಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಸಮಿತಿ ನಿರಂತರವಾಗಿ ಧ್ವನಿಯಾಗಲಿದೆ ಎಂದರು.
ಶಿವಪುರ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ನೀಡಿದ ಸಹಕಾರ ಮತ್ತು ವಿಶ್ವಾಸಕ್ಕೆ ಸಮಿತಿ ಮುಖಂಡರು ಕೃತಜ್ಞತೆ ಸಲ್ಲಿಸಿದರು.
ಸಭೆಯಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿಯ ಫೌಂಡರ್ ಹಾಗೂ ಅಧ್ಯಕ್ಷ ಬಿ.ಡಿ. ಇನಾಮದಾರ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

