ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಕ್ಟೋಬರ್ ೧೧ರಂದು ಜಿಲ್ಲೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್–೨೦೨೬)ಯನ್ನು ಸುಸೂತ್ರವಾಗಿ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯ ೨೪ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–೨೦೨೩ರ ಕಲಂ ೧೬೩ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಲಾಗಿದ್ದು, ಅಕ್ಟೋಬರ್ ೧೧ರಂದು ಬೆಳಿಗ್ಗೆ ೮.೩೦ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷಾ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶದಲ್ಲಿ ಸೂಚಿಸಲಾಗಿದೆ.

